ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಕಾಂತೇಶ್ ಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಸಿಡಿದೆದ್ದಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಇದಕ್ಕೆ ಯಡಿಯೂರಪ್ಪನವರೇ ಕಾರಣಕರ್ತರೆಂದು ಆರೋಪಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅವರ ಪುತ್ರ ಬಿ.ವೈ. ರಾಘವೇಂದ್ರ ವಿರುದ್ಧ ಸ್ಪರ್ಧಿಸಲು ಮುಂದಾಗಿದ್ದಾರೆ.
ಈ ರೀತಿಯ ಬಂಡಾಯ ಅಭ್ಯರ್ಥಿಗಳ ಮನವೊಲಿಸಲು ಮುಂದಾಗಿರುವ ಬಿಜೆಪಿ ಹೈಕಮಾಂಡ್ ನಾಯಕರು, ಅವರುಗಳೊಂದಿಗೆ ಮಾತನಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಇದೇ ವಿಧಾನವನ್ನು ಕೇಂದ್ರ ಬಿಜೆಪಿ ನಾಯಕರು ಅನುಸರಿಸಿದ್ದರು. ಆ ಸಂದರ್ಭದಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಈಶ್ವರಪ್ಪನವರಿಗೆ ಟಿಕೆಟ್ ನಿರಾಕರಿಸಿದ್ದು, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾತನಾಡಿದ್ದು, ಇದಕ್ಕೆ ಸ್ಪಂದಿಸಿ ಈಶ್ವರಪ್ಪ ಕಣದಿಂದ ಹಿಂದೆ ಸರಿದಿದ್ದರು.
ತಮ್ಮ ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗಲಿಲ್ಲವೆಂಬ ಕಾರಣಕ್ಕೆ ಇದೀಗ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಧಿಕೃತ ಬಿಜೆಪಿ ಅಭ್ಯರ್ಥಿ ಯಡಿಯೂರಪ್ಪನವರ ಪುತ್ರ ಬಿ.ವೈ. ರಾಘವೇಂದ್ರ ವಿರುದ್ಧ ಸ್ಪರ್ಧಿಸಲು ಮುಂದಾಗಿರುವ ಈಶ್ವರಪ್ಪನವರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಡೆದುಕೊಂಡಂತೆ ಕೇಂದ್ರ ಬಿಜೆಪಿ ನಾಯಕರು ತಮ್ಮ ಮನವೊಲಿಸಲು ಮುಂದಾಗಬಹುದು, ಆಗ ಪುತ್ರನಿಗೆ ಮತ್ತೊಂದು ಸ್ಥಾನ ಕೇಳಬಹುದು ಎಂಬ ಅವರ ನಿರೀಕ್ಷೆ ಹುಸಿಯಾಗುವ ಸಾಧ್ಯತೆ ಇದೆ. ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಸಚಿವ ಅಮಿತ್ ಷಾ, ಈಶ್ವರಪ್ಪನವರೊಂದಿಗೆ ಮಾತನಾಡಿ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸೂಚಿಸಿದ್ದರು. ಅಲ್ಲದೆ ದೆಹಲಿಗೆ ಬರುವಂತೆ ಆಹ್ವಾನಿಸಿದ್ದರು.
ಇದನ್ನು ನಂಬಿ ಈಶ್ವರಪ್ಪ ದೆಹಲಿಗೆ ಹೋದ ವೇಳೆ ಅಮಿತ್ ಶಾ ಭೇಟಿಯಾಗಲು ನಿರಾಕರಿಸಿ ಮೊದಲ ಶಾಕ್ ನೀಡಿದ್ದರು. ಇದಕ್ಕೆ ಒಂದಷ್ಟು ತೇಪೆ ಹಚ್ಚಿದ್ದ ಈಶ್ವರಪ್ಪ, ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಮಾಡುತ್ತಿರುವ ಯಡಿಯೂರಪ್ಪನವರ ಪುತ್ರನನ್ನು ಸೋಲಿಸಲು ನನಗೆ ಪರೋಕ್ಷ ಸೂಚನೆ ನೀಡಲಾಗಿದೆ ಎಂದು ಹೇಳಿಕೊಂಡಿದ್ದರು. ಆದರೆ ಅದೆಲ್ಲ ಈಗ ಹುಸಿಯಾಗಿದ್ದು, ಈ ಮೊದಲೆಲ್ಲಾ ಈಶ್ವರಪ್ಪನವರ ಮನವೊಲಿಸುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್, ಈಶ್ವರಪ್ಪ ಯಾರು ಎಂದೇ ಗೊತ್ತಿಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಈಶ್ವರಪ್ಪರನ್ನು ಮೂಲೆಗುಂಪು ಮಾಡಲಾಗುತ್ತಿದೆಯಾ ಎಂಬ ಅನುಮಾನ ರಾಜಕೀಯ ವಲಯದಲ್ಲಿ ಮೂಡಿದೆ.