2024ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಲ್ಪಸಂಖ್ಯಾತರನ್ನು ಸೆಳೆಯಲು ಬಿಜೆಪಿ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮಾರ್ಚ್ 10 ರಿಂದ ದೇಶದ ವಿವಿಧ ಭಾಗಗಳಲ್ಲಿ ಸರಣಿ ಸಭೆ ನಡೆಸಲಿದೆ ಎಂದು ತಿಳಿದುಬಂದಿದೆ.
ಮೊದಲ ಹಂತದಲ್ಲಿ 14 ರಾಜ್ಯಗಳ 64 ಜಿಲ್ಲೆಗಳಲ್ಲಿ ಈ ಸಭೆ ನಡೆಯಲಿದ್ದು, ಜಮ್ಮು-ಕಾಶ್ಮೀರ, ದೆಹಲಿ, ಗೋವಾ, ಹರಿಯಾಣ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ತಮಿಳುನಾಡು, ತೆಲಂಗಾಣ, ಮಧ್ಯಪ್ರದೇಶ, ಲಡಾಕ್, ಮಹಾರಾಷ್ಟ್ರ, ಕೇರಳ ಹಾಗೂ ಬಿಹಾರದಲ್ಲಿ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳಿಗೆ ಸೇರದ ಅಲ್ಪಸಂಖ್ಯಾತ ಸಮುದಾಯದ ಹಾಗೂ ಸಮುದಾಯದ ಮೇಲೆ ಪ್ರಭಾವ ಬೀರಬಹುದಾದ ವೈದ್ಯರು, ಇಂಜಿನಿಯರ್, ಉದ್ಯಮಿಗಳು ಸೇರಿದಂತೆ ಪ್ರಮುಖ ವ್ಯಕ್ತಿಗಳ ಜೊತೆ ಸಭೆ ನಡೆಯಲಿದೆ ಎನ್ನಲಾಗಿದೆ. ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ ಇಂತಹ 5000 ಮಂದಿಯನ್ನು ಗುರುತಿಸುವ ಕಾರ್ಯ ನಡೆಯಲಿದೆ.
ಇತ್ತೀಚೆಗೆ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರನ್ನು ಪಕ್ಷದತ್ತ ಸೆಳೆಯುವ ಕಾರ್ಯ ಮಾಡಬೇಕು ಎಂದು ಹೇಳಿದ್ದರು. ಅಲ್ಲದೆ ಯಾವುದೇ ಸಮುದಾಯದ ವಿರುದ್ಧ ಭಾವನೆಗಳನ್ನು ಕೆರಳಿಸುವ ಮಾತುಗಳನ್ನು ಆಡಬಾರದು ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.