ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಬ್ಬರದ ಪ್ರಚಾರ ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುಯಲ್ ಸಂವಾದ ನಡೆಸಲಿದ್ದಾರೆ. ಈ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಿದ್ದಾರೆ.
ರಾಜ್ಯದ 58,112 ಬೂತ್ ಗಳಲ್ಲಿ 1680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ವರ್ಚುಯಲ್ ಸಂವಾದ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ 15 ಕಡೆ ಪ್ರಧಾನಿ ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಏಪ್ರಿಲ್ 27ರಂದು ಬೆಳಗ್ಗೆ 9:30ಕ್ಕೆ ಸಂವಾದ ನಡೆಯಲಿದೆ. ಬೂತ್ ಗಳಲ್ಲಿ ಟಿವಿ ಹಾಗೂ ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಬೃಹತ್ ಎಲ್ಇಡಿ ಪರದೆ ಅಳವಡಿಸಿಸಲಾಗುವುದು.
ಸಂವಾದದಲ್ಲಿ ಭಾಗವಹಿಸಲು 24 ಲಕ್ಷ ಕಾರ್ಯಕರ್ತರು ನಮೋ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಹೊಸ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿಗೆ ಸಂವಾದ ಏರ್ಪಡಿಸಲಾಗಿದೆ. 58 ಸಾವಿರಕ್ಕೂ ಅಧಿಕ ಸ್ಥಳಗಳಲ್ಲಿ ಕಾರ್ಯಕರ್ತರು ಸಂವಾದ ವೀಕ್ಷಿಸಲಿದ್ದಾರೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಂಚಾಲಕರಾದ ಶೋಭಾ ಕರಂದ್ಲಾಜೆ ಮತ್ತು ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.