ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮನವೊಲಿಸುವಲ್ಲಿ ಬಿಜೆಪಿ ನಾಯಕರು ಯಶಸ್ವಿಯಾಗಿದ್ದಾರೆ.
ಯಡಿಯೂರಪ್ಪನವರಿಗೆ ದೂರವಾಣಿ ಕರೆ ಮಾಡಿದ ದೆಹಲಿ ನಾಯಕರು ಕೊಪ್ಪಳದ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಗದಗ ಬಿಜೆಪಿ ಕಚೇರಿ ಉದ್ಘಾಟನೆ ಕಾರ್ಯಕ್ರಮಕ್ಕೆ ಬಿಜೆಪಿ ಆಹ್ವಾನಿಸಿತ್ತು. ಇನ್ನು ಕೊಪ್ಪಳದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಅವರನ್ನು ಆಹ್ವಾನಿಸಿರಲಿಲ್ಲ. ತಮ್ಮನ್ನು ಕಡೆಗಣಿಸಿದ್ದಕ್ಕೆ ಯಡಿಯೂರಪ್ಪ ಗದಗದ ಕಾರ್ಯಕ್ರಮಕ್ಕೂ ಹೋಗದಿರಲು ತೀರ್ಮಾನಿಸಿದ್ದು, ಅವರ ನಡೆ ಬಿಜೆಪಿ ಪಾಳಯದಲ್ಲಿ ಕುತೂಹಲಕ್ಕೆ ಕಾರಣವಾಗಿತ್ತು.
ಈಗ ದೆಹಲಿ ನಾಯಕರಿಂದಲೇ ಕರೆ ಮಾಡಿ ಕೊಪ್ಪಳದ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ದೆಹಲಿ ನಾಯಕರು ಕರೆ ಮಾಡಿದ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಯಡಿಯೂರಪ್ಪ ಒಪ್ಪಿಗೆ ಸೂಚಿಸಿದ್ದಾರೆ. ನಾಳೆ ಕೊಪ್ಪಳದ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ, ಬಿಜೆಪಿ ಕಚೇರಿ ಉದ್ಘಾಟನೆ ಸಮಾರಂಭದಲ್ಲಿಯೂ ಭಾಗಿಯಾಗಲಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ನಾಳೆ ಕೊಪ್ಪಳದ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಭಾಗಿಯಾಗಲಿದ್ದಾರೆ, ಬಿಜೆಪಿ ಕಚೇರಿ ಉದ್ಘಾಟನೆ ಸಮಾರಂಭದಲ್ಲಿಯೂ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.