ಗದಗ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಬೆನ್ನಲ್ಲೇ ಎರಡೂ ಪಕ್ಷಗಳ ಕೆಲ ನಾಯಕರಲ್ಲಿ ಅಸಮಾಧಾ ಸ್ಫೋಟಗೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ನ ಮಾಜಿ ಶಾಸಕರು ಪಕ್ಷಕ್ಕೆ ಗುಡ್ ಬೈ ಹೇಳುತ್ತಿದ್ದಾರೆ.
ಬಿಜೆಪಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ದಿನಾಂಕವೂ ನಿಗದಿಯಾಗಿದೆ. ಶಿರಹಟ್ಟಿಯ ಪ್ರಭಾವಿ ಬಿಜೆಪಿ ನಾಯಕ, ಮಾಜಿ ಶಾಸಕ ರಾಮಣ್ಣ ಲಮಾಣಿ ಪಕ್ಷ ತೊರೆಯಲು ನಿರ್ಧರಿಸಿದ್ದು, ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.
ಈ ಕುರಿತು ಶಿರಹಟ್ಟಿ ತಾಲೂಕಿನ ಕುಂದ್ರಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ರಾಮಣ್ಣ ಲಮಾಣಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲಿದ್ದೇನೆ. ಅಕ್ಟೋಬರ್ 10ರಂದು ನಾನು ಹಾಗೂ ಮೂಡಿಗೆರೆ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಇಬ್ಬರೂ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತೇವೆ ಎಂದು ಹೇಳಿದ್ದಾರೆ.
ಇದೇ ವೇಳೆ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ರಾಮಣ್ಣ ಲಮಾಣಿ, ಬಿಜೆಪಿಯಲ್ಲಿ ಎರಡು ಬಾರಿ ಶಾಸಕನಾಗಿ ಸಾಕಷ್ಟು ಅಭಿವೃದ್ದ್ಜಿ ಕೆಲಸವನ್ನು ಮಾಡಿದ್ದೇನೆ. ಮೂರನೇ ಬಾರಿಗೆ ಟಿಕೆಟ್ ಗಾಗಿ ಎಲ್ಲಾ ಪ್ರಯತ್ನಗಳನ್ನು ನಡೆಸಿದ್ದೆ. ಎಲ್ಲ ಖರ್ಚುವೆಚ್ಚ ಭರಿಸಿ ಕಾರ್ಯಕ್ರಮಗಳನ್ನು ಮಾಡಿದ್ದೆ. ಆದರೆ ಕೊನೇ ಹಂತದಲ್ಲಿ ನನಗೆ ಟಿಕೆಟ್ ಕೊಡಲಿಲ್ಲ. ಈಗಿನ ಬಿಜೆಪಿ ಶಾಸಕ ಚಂದ್ರು ಲಮಾಣಿ ಬಿಜೆಪಿ ಕಾರ್ಯಕರ್ತರನ್ನು ಹತ್ತಿರಕ್ಕೂ ಸೇರಿಸುತ್ತಿಲ್ಲ. ರಾಮಣ್ಣ ಲಮಾಣಿ ಅಭಿಮಾನಿಗಳು ನಮ್ಮ ಹತ್ತಿರ ಬರಬೇಡಿ ಎನ್ನುತ್ತಿದ್ದಾರೆ ಎಂದು ನನ್ನ ಬೆಂಬಲಿಗರು ಅಳಲು ತೋಡಿಕೊಂಡಿದ್ದಾರೆ. ಈ ಎಲ್ಲಾ ಬೆಳವಣಿಗೆಯಿಂದ ಬೇಸರಗೊಂಡು ಪಕ್ಷ ತೊರೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.