ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೆ.8ರಂದು ಪ್ರತಿಭಟನೆಗೆ ಬಿಜೆಪಿ ರೈತ ಮೋರ್ಚಾ ಕರೆ ನೀಡಿದೆ. ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಲೋಡ್ ಶೆಡ್ಡಿಂಗ್ ನಿಂದ ವಿದ್ಯುತ್ ಅಭಾವ ಉಂಟಾಗಿದ್ದು, ರೈತರ ಪಂಪ್ ಸೆಟ್ ಗಳಿಗೆ ತೊಂದರೆಯಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ, ಜನ ವಿರೋಧಿ ನೀತಿಗೆ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುವ ಮೂಲಕ ಬಿಸಿ ಮುಟ್ಟಿಸಲಾಗುವುದು ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಸರ್ಕಾರದ ಕ್ರಮದಿಂದಾಗಿ ರೈತರು ಸಂಕಷ್ಟಕ್ಕೀಡಾಗುತ್ತಿದ್ದಾರೆ. ಒಂದೆಡೆ ಮಳೆ ಕೊರತೆ, ಇನ್ನೊಂದೆಡೆ ವಿದ್ಯುತ್ ಅಭಾವದಿಂದಾಗಿ ರೈತರ ಬದುಕು ದುಸ್ಥರವಾಗಿದೆ. ಸರ್ಕಾರದ ಈ ಧೋರಣೆ ಖಂಡಿಸಿ ತಾಲೂಕು ಮಟ್ಟದಲ್ಲಿ ಪ್ರತಿಭಟನೆಗೆ ಕರೆ ಕೊಡಲಾಗಿದ್ದು, ಬಿಜೆಪಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.
ರಾಜ್ಯದ 14 ಡ್ಯಾಂಗ್ ಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಇರುವ ನೀರನ್ನು ಹೇಗೆ ಉಪಯೋಗಿಸಬೇಕು ಎಂಬ ಬಗ್ಗೆಯೂ ಕ್ರಮ ತೆಗೆದುಕೊಂಡಿಲ್ಲ. ವಿದ್ಯುತ್ ಪೂರೈಕೆಯಲ್ಲಿಯೂ ಅಭಾವವಿದ್ದು, ರೈತರಿಗೆ ಸಮಸ್ಯೆಯಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿಯೇ 50 ರೈತರ ಆತ್ಮಹತ್ಯೆ ಆಗಿದೆ ಎಂದು ಕಿಡಿಕಾರಿದ್ದಾರೆ.