ಬೆಂಗಳೂರು: ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಶೇಕಡ 18 ರಷ್ಟು ಹೆಚ್ಚಳ ಮಾಡಬೇಕೆಂದು ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಮ್ಮತಿ ನೀಡಿಲ್ಲ. ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಕೆ ಮಾಡದಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ ಎನ್ನಲಾಗಿದೆ.
ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಿದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಸದ್ಯಕ್ಕೆ ದರ ಹೆಚ್ಚಳ ಬೇಡವೆಂದು ಹೇಳಲಾಗಿದೆ.
ಕೊರೋನಾದಿಂದಾಗಿ ಪ್ರಯಾಣಿಕರ ಸಂಖ್ಯೆ ತೀವ್ರ ಕುಸಿತ ಕಂಡಿದೆ. ಸಾರಿಗೆ ಸಂಸ್ಥೆಗಳಿಗೆ ಆದಾಯ ಇಲ್ಲದೆ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಇಂಧನ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಸಂಸ್ಥೆ ನೌಕರರಿಗೆ ವೇತನ ನೀಡಲು ಪರದಾಡುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಸಿಎಂ ಸದ್ಯಕ್ಕೆ ಪ್ರಯಾಣ ದರ ಹೆಚ್ಚಳ ಮಾಡದಂತೆ ತಿಳಿಸಿದ್ದಾರೆ ಎನ್ನಲಾಗಿದೆ.