ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಹಿಂದಿನಂತೆಯೇ ಶಾಲೆಗಳಲ್ಲಿ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಮಾರ್ಚ್ 13 ರಿಂದ ಪರೀಕ್ಷೆ ನಡೆಯಲಿದೆ.
ರಾಜ್ಯ ಪಠ್ಯಕ್ರಮದ ಶಾಲೆಗಳ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ಮತ್ತಿತರರು ಸರ್ಕಾರದ ಸುತ್ತೋಲೆ ರದ್ದು ಪಡಿಸುವಂತೆ ಕೋರಿ ಸಲ್ಲಿಸಿದ್ದ ತಕರಾರು ಅರ್ಜಿಗಳನ್ನು ಪುರಸ್ಕರಿಸಿದ ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ನ್ಯಾಯಪೀಠ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿ ಆದೇಶ ನೀಡಿದೆ.
ಮಕ್ಕಳ ಶೈಕ್ಷಣಿಕ ಗುಣಮಟ್ಟ, ಬುದ್ಧಿವಂತಿಕೆ ಪರೀಕ್ಷಿಸಲು, ಶಾಲೆಗಳು ಮತ್ತು ಬೋಧನಾ ಸಿಬ್ಬಂದಿಯ ಮೌಲ್ಯಮಾಪನ ಮಾಡಲು ಇಂತಹ ಪರೀಕ್ಷೆಯ ಅಗತ್ಯವಿದೆ. ಶಾಸಕಾಂಗದ ಮುಂದಿಟ್ಟು ಸುತ್ತೋಲೆ ಪ್ರಕಟಿಸಬೇಕು ಎಂದು ಆರ್‌ಟಿಇ ಹೇಳುತ್ತದೆ. ಈ ಪ್ರಕರಣದಲ್ಲಿ ಪ್ರಕ್ರಿಯೆ ಪಾಲನೆಯಾಗಿಲ್ಲ. ಹೀಗಾಗಿ ಸುತ್ತೋಲೆ ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್ ಹೇಳಿದೆ.