ನವದೆಹಲಿ: ನಿಗಮ –ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಬೆಂಗಳೂರಿನಲ್ಲಿಯೂ ಹಲವು ಸಭೆ ನಡೆಸಿ ಪಟ್ಟಿ ಸಿದ್ಧಪಡಿಸಲಾಗಿತ್ತು. ನಾವು ಸಿದ್ಧಪಡಿಸಿದ ಪಟ್ಟಿಯನ್ನು ಪಕ್ಷದ ವರಿಷ್ಠರಿಗೆ ನೀಡಿದ್ದೇವೆ. ಶೀಘ್ರದಲ್ಲಿಯೇ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬಹುದು. ಕಾರ್ಯಕರ್ತರಿಗೂ ಅವಕಾಶ ನೀಡುವಂತೆ ಮೊದಲಿನಿಂದಲೂ ಪ್ರಸ್ತಾಪ ಇದೆ. ಕಾರ್ಯಕರ್ತರಿಗೆ ಅವಕಾಶ ನೀಡಲು ನಮ್ಮ ವಿರೋಧವಿಲ್ಲ. ಪಟ್ಟಿ ಬಿಡುಗಡೆ ಬಗ್ಗೆ ಹೈಕಮಾಂಡ್ ನಾಯಕರು ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ತಯಾರಿ ಬಗ್ಗೆ ಚರ್ಚೆ ನಡೆಸಲಾಗಿದೆ. ಡಿಸೆಂಬರ್ 22 ರೊಳಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ. ನಾಳೆ ಸಂಪುಟ ಸಭೆಯಲ್ಲಿಯೂ ಮುಖ್ಯಮಂತ್ರಿಗಳು ಈ ಬಗ್ಗೆ ಸೂಚನೆ ನೀಡುವರು. ಉಸ್ತುವಾರಿಗಳು ಮೂರು ಅಭ್ಯರ್ಥಿಗಳ ಹೆಸರು ಸೂಚಿಸಬೇಕು. ಅಂತಿಮವಾಗಿ ಯಾರಿಗೆ ಟಿಕೆಟ್ ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ಸಂಕ್ರಾಂತಿಯೊಳಗೆ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅಂತಹ ಮುಹೂರ್ತ ಯಾವುದೂ ಇಲ್ಲ, ಎಲ್ಲವನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದರು.