ಬೆಂಗಳೂರು : ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ವಿದ್ವಂಸಕ ಕೃತ್ಯವನ್ನು ನಮ್ಮ ಸರ್ಕಾರ ಸಹಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ವಿದ್ವಂಸಕ ಕೃತ್ಯ ನಡೆಸುವುದಾಗಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಈಗಾಗಲೇ ಶಾಲೆಗಳಲ್ಲಿ ಪರಿಶೀಲನೆ ನಡೆಸುತ್ತಿವೆ. ಸಾರ್ವಜನಿಕರು ಮತ್ತು ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ.
ಈ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿ ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದೇನೆ.ನಾಡಿನ ಜನರಿಗೆ ಸುರಕ್ಷಿತ ವಾತಾವರಣ, ನೆಮ್ಮದಿಯ ಬದುಕು ಕಲ್ಪಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ.ವಿದ್ವಂಸಕ ಕೃತ್ಯದ ಬೆದರಿಕೆ ಒಡ್ಡಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವುದು, ಸಾರ್ವಜನಿಕರ ನೆಮ್ಮದಿ ಕದಡುವುದು ಇಂತಹಾ ಯಾವುದೇ ದುಷ್ಟ ಆಲೋಚನೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಘಟನೆಯ ಹಿಂದಿರುವ ದುಷ್ಟಶಕ್ತಿಗಳನ್ನು ಆದಷ್ಟು ಬೇಗ ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸುತ್ತೇವೆ ಎಂದು ಹೇಳಿದರು.