
ಬೆಂಗಳೂರು: ಇನ್ನು ಮುಂದೆ ಪ್ರತಿ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಗುರುವಾರ ವಿಧಾನಸೌಧದ ಆವರಣದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಿರುವ ಮೂರು ದಿನಗಳ ಪುಸ್ತಕ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನನ್ನು ಮಾನವನನ್ನಾಗಿಸುವ ನಿಟ್ಟಿನಲ್ಲಿ ಪುಸ್ತಕ ಮತ್ತು ಸಾಹಿತ್ಯ ಪ್ರಮುಖ ಪಾತ್ರ ವಹಿಸಲಿದೆ. ಹಾಗಾಗಿ ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಡಿಜಿಟಲ್ ಯುಗದಲ್ಲಿ ಮಕ್ಕಳು ಪುಸ್ತಕ ಓದುವುದನ್ನು ಮರೆತಿದ್ದಾರೆ. ಮೊಬೈಲ್ ಚಟ ಅಂಟಿಸಿಕೊಂಡಿದ್ದಾರೆ. ಇದರಿಂದ ಹೊರಬಂದು ಒಳ್ಳೆಯ ಪುಸ್ತಕ ಓದುವುದನ್ನು ರೂಢಿಸಿಕೊಳ್ಳಬೇಕು. ಪುಸ್ತಕಗಳನ್ನು ಖರೀದಿಸಿ ಮನೆಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ಪ್ರತಿ ಶಾಸಕರಿಗೆ ಪುಸ್ತಕ ಖರೀದಿಗಾಗಿ ಎರಡು ಲಕ್ಷ ರೂಪಾಯಿ ಧನಸಹಾಯ ನೀಡಲಾಗುತ್ತಿದೆ. ಈ ಅನುದಾನದಲ್ಲಿ ಶಾಸಕರು ತಮ್ಮ ಕ್ಷೇತ್ರದ ಗ್ರಂಥಾಲಯಗಳಿಗೆ ಪುಸ್ತಕ ಖರೀದಿ ಮಾಡಬಹುದು ಎಂದು ಹೇಳಿದ್ದಾರೆ.
ವಿಧಾನಸೌಧ ಎಂದರೆ ಶಾಸಕರು, ಸಚಿವರು, ಅಧಿಕಾರಿಗಳಿಗೆ ಮಾತ್ರವಲ್ಲ, ಎಲ್ಲಾ ಪ್ರಜೆಗಳದ್ದು ಎನ್ನುವ ಭಾವನೆ ಬರಬೇಕು ಎನ್ನುವ ಉದ್ದೇಶದಿಂದ ಪುಸ್ತಕ ಮೇಳ ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನಸಭೆ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ್, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೊದಲಾದವರು ಇದ್ದರು.