ದಿನೇ ದಿನೇ ತಾರಕಕ್ಕೇರುತ್ತಿರುವ ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ ಕೊಟ್ಟಿದ್ದಾರೆ. ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಸಂಸದರ ನಿಯೋಗ ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಗಡಿ ವಿವಾದದಲ್ಲಿ ಮಧ್ಯಪ್ರವೇಶಿಸಲು ಕೋರಿದೆ. ಡಿಸೆಂಬರ್ 14 ರಂದು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವುದಾಗಿ ಗೃಹ ಸಚಿವರು ನಿಯೋಗಕ್ಕೆ ಭರವಸೆ ನೀಡಿದರು ಎಂದು ನಿಯೋಗದ ಸದಸ್ಯರು ತಿಳಿಸಿದ್ದಾರೆ.
“ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರು ರಚಿಸಿದ ನಮ್ಮ ಸಂವಿಧಾನವು ನಮಗೆ ದೇಶದಲ್ಲಿ ಎಲ್ಲಿ ಬೇಕಾದರೂ ಮುಕ್ತವಾಗಿ ಚಲಿಸುವ ಹಕ್ಕನ್ನು ನೀಡಿದೆ. ಆದರೆ ನಮ್ಮ ಮುಕ್ತ ಚಲನೆಯನ್ನು ತಡೆಯುವ ಪ್ರಯತ್ನಗಳು ನಡೆಯುತ್ತಿವೆ. ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ಘರ್ಷಣೆಗೆ ಸಂಬಂಧಿಸಿದಂತೆ ನಮ್ಮ ಕಳವಳವನ್ನು ವ್ಯಕ್ತಪಡಿಸಲು ಎಂವಿಎ ಸಂಸದರ ನಿಯೋಗ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದೆ. ಈ ವಿಷಯದ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವುದಾಗಿ ಗೃಹ ಸಚಿವರು ಭರವಸೆ ನೀಡಿದ್ದಾರೆ ಎಂದು ನಿಯೋಗದ ಭಾಗವಾಗಿದ್ದ ಎನ್‌ಸಿಪಿ ಸಂಸದ ಅಮೋಲ್ ಕೊಲ್ಹೆ ತಿಳಿಸಿದರು.