ಬೆಂಗಳೂರು: ರಾಜ್ಯದಲ್ಲಿ 3.17 ಲಕ್ಷ ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದ್ದು, ಅನರ್ಹರಲ್ಲಿ ಸರ್ಕಾರಿ ನೌಕರವೇ ಅಧಿಕ ಸಂಖ್ಯೆಯಲ್ಲಿದ್ದಾರೆ ಎಂದು ಹೇಳಲಾಗಿದೆ.
ಸುಳ್ಳು ಮಾಹಿತಿ ನೀಡಿ ಆರ್ಥಿಕವಾಗಿ ಸದೃಢರಾದವರು ಪಡೆದುಕೊಂಡಿದ್ದ 3,17,441 ಬಿಪಿಎಲ್ ಪಡಿತರ ಕಾರ್ಡ್ ಗಳನ್ನು ಆಹಾರ ಇಲಾಖೆ ರದ್ದು ಪಡಿಸಿದೆ. ಈ ರೀತಿ ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದುಕೊಂಡಿದ್ದ ಅನರ್ಹರಿಂದ 11.91 ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ.
ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ವಾರ್ಷಿಕ 1.20 ಲಕ್ಷ ರೂ. ಆದಾಯ ಗಳಿಸುವವರು ಹಾಗೂ ಮೂರು ಹೆಕ್ಟೇರ್ ಗಿಂತ ಹೆಚ್ಚಿನ ಭೂಮಿ ಹೊಂದಿದವರು, ಕಾರು ಮಾಲೀಕರು ಕೂಡ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದರು. ಆಹಾರ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅನರ್ಹರು ಕಾರ್ಡ್ ಪಡೆದುಕೊಂಡಿರುವುದು ಗೊತ್ತಾಗಿದೆ. ಸ್ವಯಂ ಪ್ರೇರಿತವಾಗಿ ಪಡಿತರ ಚೀಟಿ ವಾಪಸ್ ನೀಡಲು ಗಡುವು ನೀಡಿದ್ದರೂ ಕೆಲವರು ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಹಂತ ಹಂತವಾಗಿ ಪರಿಶೀಲನೆ ನಡೆಸಿ ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.
2022 -23ನೇ ಸಾಲಿನಲ್ಲಿ 15,511 ಬಿಪಿಎಲ್ ಕಾರ್ಡುಗಳು ಸೇರಿದಂತೆ ಒಂದೂವರೆ ವರ್ಷದ ಅವಧಿಯಲ್ಲಿ 3,17,441 ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ.
ತೆರಿಗೆ ಪಾವತಿಸುವ 85,195 ಜನರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗಿದೆ. ಮೂರು ಹೆಕ್ಟೇರಿಗಿಂತ ಹೆಚ್ಚಿನ ಜಮೀನು ಹೊಂದಿರುವ 1,21,914 ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ, ವಾರ್ಷಿಕ 1.20 ಲಕ್ಷ ರೂ. ಆದಾಯ ಇರುವವರ 23,563 ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ.