ಬೆಂಗಳೂರು: ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಆಗಸ್ಟ್ 1 ರಂದು ಹಾಗೂ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.
ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್ ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಗೃಹ ಲಕ್ಷ್ಮಿ ಯೋಜನೆಯನ್ನು ಆಗಸ್ಟ್ 17 ಅಥವಾ 18 ರಂದು ಬೆಳಗಾವಿಯಲ್ಲಿ ಚಾಲನೆ ನೀಡುವ ಕುರಿತು ಚರ್ಚಿಸಲಾಯಿತು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್ 15 ರಿಂದ ಪ್ರಾರಂಭವಾಗಲಿದೆ. ಈ ಯೋಜನೆಗೆ ಆನ್‌ಲೈನ್ ನಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅಂತೆಯೇ ನಾಡಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು ಎಂದರು.