ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ಘೋಷಿಸಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ ಸಿದ್ದರಾಮಯ್ಯ, ಕೃಷಿ ತಿದ್ದುಪಡಿ ವಿಧೇಯಕಗಳ ಪ್ರತಿಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಯಡಿಯೂರಪ್ಪನವರು ಹಸಿರು ಶಾಲು ಹಾಕಿಕೊಂಡು ಪ್ರಮಾಣವಚನ ಸ್ವೀಕರಿಸುತ್ತಾರೆ. ಪ್ರಮಾಣವಚನದ ಬಳಿಕ ಶಾಲು ತೆಗೆದು ಹಾಕುತ್ತಾರೆ. ರೈತರಿಗೆ ಅನುಕೂಲವಾಗುವಂತ ಯಾವುದೇ ಯೋಜನೆಗಳನ್ನೂ ಜಾರಿಗೆ ತಂದಿಲ್ಲ. ಕೇಂದ್ರ ಸರ್ಕಾರ ಹೇಳಿದಂತೆ ತಿದ್ದುಪಡಿ ಕಾನೂನು ಜಾರಿಗೆ ತಂದಿದ್ದಾರೆ. ಕಾರ್ಪೊರೇಟ್ ಕಂಪನಿಗಳು ಅಮಿತ್ ಶಾಗೆ ಹೇಳಿದವು. ಅಮಿತ್ ಶಾ ಕೃಷಿ ತಿದ್ದುಪಡಿ ಕಾಯ್ದೆ ಜಾರಿಗೆ ತರಬೇಕು ಎಂದು ಬಿಜೆಪಿ ನಾಯಕರಿಗೆ ಹೇಳಿದ್ದಾರೆ. ಅವರು ಹೇಳಿದಂತೆ ಇವರು ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಗುಲಾಮರಾ ಎಂದು ಪ್ರಶ್ನಿಸಿದ್ದಾರೆ.
ಇನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರಿಗೆ ನಾಚಿಕೆಯಾಗಬೇಕು. ಯಾವುದೇ ವ್ಯಕ್ತಿಗಾದರೂ ಒಂದು ನಿಲುವು ಇರಬೇಕು. ತಾನು ರೈತರ ಪರ ಇದ್ದೇನೆ ಎನ್ನಬೇಕು. ಇಲ್ಲವೇ ಸರ್ಕಾರದ ಪರ ಇದ್ದೇನೆ ಎನ್ನಬೇಕು. ಆದರೆ ಕುಮಾರಸ್ವಾಮಿ ಎರಡೂ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.