ಬೆಂಗಳೂರು: ನಮ್ಮ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಘೋಷಿಸಲಾಗಿರುವಂತೆ ಜುಲೈ 1ರಿಂದ ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ವಿತರಿಸುವುದಾಗಿ ಘೋಷಿಸಿದ್ದೆವು. ಆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ವಿತರಣೆ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಶಕ್ತಿಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈಗಾಗಲೇ ನಾವು 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದೇವೆ. ಅದರಲ್ಲಿ ಒಂದು ಯೋಜನೆ ಜಾರಿಗೆ ಬಂದಿದೆ. ನಮ್ಮ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯೂ ಒಂದು. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತಿ ತಿಂಗಳು 10 ಕೆಜಿ ಅಕ್ಕಿ ಕೊಡುತ್ತೇವೆ. ಜುಲೈ 1ರಿಂದ 10 ಕೆಜಿ ಅಕ್ಕಿ ಕೊಡುವುದಾಗಿ ಜನರಿಗೆ ಭರವಸೆ ನೀಡಿದ್ದರು, ಈ ನಿಟ್ಟಿನಲ್ಲಿ ಫುಡ್ ಕಾರ್ಪೊರೇಶನ್ ಇಂಡಿಯಾಗೆ ಪತ್ರ ಬರೆಯಲಾಗಿತ್ತು. ಅವರೂ ಒಪ್ಪಿದ್ದರು. ಆದರೆ ಈಗ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದ್ದು, ಅಕ್ಕಿ ನೀಡಲು ವಿಳಂಬ ಮಾಡುತ್ತಿದೆ ಎಂದಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಯೋಜನೆಗೆ ತಿಂಗಳಿಗೆ 2 ಲಕ್ಷ 28 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕು. ಅದಕ್ಕಾಗಿ ತಿಂಗಳಿಗೆ 840 ಕೋಟಿ ರೂ. ವೆಚ್ಚ ತಗುಲಲಿದೆ ಎಂದು ವಿವರಿಸಿದರು.