ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.
ನೂತನ ಸಿಎಂ ಹಾಗೂ ಡಿಸಿಎಂ ಜೊತೆಗೆ ಹಿರಿಯ ಶಾಸಕರಾದ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್ ಖಾನ್ ಸೇರಿದಂತೆ 8 ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಬಿಹಾರ ಸಿಎಂ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ ವಿಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ರಂಗಸ್ವಾಮಿ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಮೆಹಬೂಬಾ ಮುಫ್ತಿ, ನಟರಾದ ಶಿವರಾಜ್ ಕುಮಾರ್, ನಟ ಕಮಲ್ ಹಾಸನ್, ದುನಿಯಾ ವಿಜಯ್, ರಮ್ಯಾ, ನಿಶ್ವಿಕಾ ನಾಯ್ಡು ಸೇರಿದಂತೆ ಗಣ್ಯಾತಿ ಗಣ್ಯರು ಸಾಕ್ಷಿಯಾದರು.