ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಗಳ ಹಾವಳಿ ಮಿತಿ ಮೀರಿದೆ. ಇವುಗಳ ಮೂಲಗಳನ್ನು ಪತ್ತೆ ಹಚ್ಚಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಈ ಹಿಂದೆ 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಫೇಕ್ ನ್ಯೂಸ್‌ಗಳನ್ನು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಇವೆ. ಹೀಗಾಗಿ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕಿತ್ತೆಸೆಯುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಜೊತೆಗೂ ಸಿಎಂ ಚರ್ಚೆ ನಡೆಸಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪು ಘರ್ಷಣೆ, ಗಲಭೆ ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎಂಬ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಫೇಕ್ ನ್ಯೂಸ್ ಪತ್ತೆಗಾಗಿ ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ತಾಂತ್ರಿಕ ತಂಡ ರಚಿಸಿ ಜನರನ್ನು ಜಾಗೃತಿಗೊಳಿಸುವ ಕೆಲಸ ನಡೆದಿತ್ತು. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದರಾ ಪ್ರತಿ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಆದೇಶಿಸಿದ್ದಾರೆ.