ಮೋದಿ ಉಪನಾಮದ ಕುರಿತ ತಮ್ಮ ಹೇಳಿಕೆಯಿಂದ ಗುಜರಾತಿನ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಜಾಮೀನು ಮಂಜೂರಾಗಿದ್ದು, ಅವಧಿಯನ್ನು ಏಪ್ರಿಲ್ 13ರವರೆಗೆ ವಿಸ್ತರಿಸಲಾಗಿದೆ.
ರಾಹುಲ್ ಗಾಂಧಿ ಇಂದು ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಸೂರತ್ ಸೆಷನ್ಸ್ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಮೇ 3 ಕ್ಕೆ ನಿಗದಿಪಡಿಸಿದೆ.
ಕರ್ನಾಟಕದ ಕೋಲಾರದಲ್ಲಿ ಭಾಷಣ ಮಾಡುವ ವೇಳೆ ರಾಹುಲ್ ಗಾಂಧಿಯವರು, ಮೋದಿ ಉಪ ನಾಮ ಹೊಂದಿರುವವರು ಕಳ್ಳರೇ ಯಾಕಾಗಿರುತ್ತಾರೆ ಎಂದು ಹೇಳಿದ್ದು ಈ ಹಿನ್ನೆಲೆಯಲ್ಲಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಈ ಪ್ರಕರಣದ ತೀರ್ಪಿನಲ್ಲಿ ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ನೀಡಲಾಗಿದೆ.