ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಸಿಎಂ ಜೈರಾಮ್ ಠಾಕೂರ್ ತಮ್ಮ ಸ್ವಕ್ಷೇತ್ರದಲ್ಲಿ ಗೆಲುವು ಸಾಧಿಸಿದರೂ ಸಿಎಂ ಪಟ್ಟ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಆಡಳಿತಾರೂಢ ಬಿಜೆಪಿ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ್ದು, ಜೈರಾಮ್ ಠಾಕೂರ್ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ 39 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ 26 ಕ್ಷೇತ್ರಗಳಲ್ಲಿ ಮುನ್ನಡೆ ಮೂಲಕ ಮುಖಭಂಗ ಅನುಭವಿಸಿದೆ. ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದಾರೆ.
ಬಿಜೆಪಿ ಸೋಲು ಹಿನ್ನೆಲೆಯಲ್ಲಿ ಸಿಎಂ ಜೈರಾಮ್ ಠಾಕೂರ್ ರಾಜಿನಾಮೆ ನೀಡಿದ್ದು, ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ. ಈ ವೇಳೆ ಮಾತನಾಡಿದ ನಿರ್ಗಮಿತ ಸಿಎಂ ಠಾಕೂರ್, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪರ ಅಲೆಯಿದೆ. ಜನರ ಆದೇಶಕ್ಕೆ ಗೌರವದಿಂದ ತಲೆ ಬಾಗುವುದಾಗಿ ತಿಳಿಸಿದ್ದಾರೆ.