ರಾಜ್ಯ ವಿಧಾನಸಭೆಗೆ ಇನ್ನು ಎರಡ್ಮೂರು ತಿಂಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಹಿರಿಯ ನಟ ಹಾಗೂ ಈ ಹಿಂದೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದ ಅನಂತನಾಗ್ ಬಿಜೆಪಿ ಸೇರ್ಪಡೆಗೆ ನಿರ್ಧರಿಸಿದ್ದಾರೆ.
ಇಂದು ಸಂಜೆ 4:30ಕ್ಕೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಅನಂತ್ ನಾಗ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಸಂದರ್ಭದಲ್ಲಿ ಸಚಿವರುಗಳಾದ ಮುನಿರತ್ನ, ಡಾ. ಸುಧಾಕರ್ ಸೇರಿದಂತೆ ಪ್ರಮುಖ ನಾಯಕರು ಹಾಜರಿರಲಿದ್ದಾರೆ ಎನ್ನಲಾಗಿದೆ.
ಜೆ.ಎಚ್. ಪಟೇಲ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅನಂತನಾಗ್ ನಗರಾಭಿವೃದ್ಧಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರಾ ಎಂಬ ಕುತೂಹಲ ಮೂಡಿದೆ.
ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಲು ಭರ್ಜರಿ ತಯಾರಿ ನಡೆಸಿರುವ ಬಿಜೆಪಿ, ಜನಪ್ರಿಯತೆ ಹೊಂದಿರುವ ಅನಂತನಾಗ್ ಅವರನ್ನು ಚುನಾವಣಾ ಪ್ರಚಾರ ಕಾರ್ಯದಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.