ಮಥುರಾ : ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಗೋಪಾಲ್ಬಾಗ್ ಪ್ರದೇಶದ ಪಟಾಕಿ ಮಾರುಕಟ್ಟೆಯಲ್ಲಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದಾರೆ ಮತ್ತು ಏಳು ಅಂಗಡಿಗಳು ಸುಟ್ಟು ಬೂದಿಯಾಗಿವೆ.
ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ತೀವ್ರ ಸುಟ್ಟಗಾಯಗಳಿಗೆ ಒಳಗಾದ ಜನರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಅಧಿಕಾರಿಗಳ ಪ್ರಕಾರ, ಪಟಾಕಿ ಅಂಗಡಿಯೊಂದರಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಮತ್ತು ವೇಗವಾಗಿ ಇತರ ಆರು ಅಂಗಡಿಗಳಿಗೆ ಹರಡಿತು.ಗೋಪಾಲ್ಬಾಗ್ ಪ್ರದೇಶದಲ್ಲಿ ಪಟಾಕಿ ಮಾರಾಟ ಮಾಡುವ ಏಳು ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಅಜಯ್ ಕಿಶೋರ್ ತಿಳಿಸಿದ್ದಾರೆ. 9 ಜನರಿಗೆ ಸುಟ್ಟ ಗಾಯಗಳಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಎಲ್ಲಾ ಏಳು ಅಂಗಡಿಗಳಿಗೆ ಪಟಾಕಿಗಳನ್ನು ಮಾರಾಟ ಮಾಡಲು ಅನುಮತಿ ಇದೆ ಎಂದು ಅವರು ಹೇಳಿದರು. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.