ಬೆಂಗಳೂರು : ಬೆಂಗಳೂರಿನ ಜಿ.ಆರ್. ಪಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಸೇರಿ 8 ಮಂದಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಮೇ.27 ರಂದು ಸಿಸಿಬಿ ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗುವಂತೆ ತೆಲುಗು ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ವಾಸು ಎಂಬುವವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್.ಪಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ನಟ-ನಟಿಯರು, ರಾಜಕಾರಣಿಗಳ ಮಕ್ಕಳು ಭಾಗಿಯಾಗಿದ್ದರು. ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದ ವೇಳೆ 103 ಜನರು ಸಿಕ್ಕಿಬಿದ್ದಿದ್ದರು. ಟಾಲಿವುಡ್ ಖ್ಯಾತ ನಟಿ ಹೇಮಾ, ಆಶು ರೈ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು. ರೇವ್ ಪಾರ್ಟಿ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿತ್ತು.ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಜನರ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಅವರಲ್ಲಿ 86 ಜನರು ಡ್ರಗ್ಸ್ ಸೇವಿಸಿರುವುದು ದೃಢವಾಗಿದೆ. ಇವರಲ್ಲಿ 27 ಜನ ಯುವತಿಯರೂ ಇದ್ದಾರೆ ಎಂದು ತಿಳಿದುಬಂದಿದೆ.
ನಟಿ ಹೇಮಾ, ಆಶು ರೈ ಸೇರಿದಂತೆ 86 ಜನರ ರಕ್ತದ ಮಾದರಿ ವರದಿ ಬಂದಿದ್ದು, 86 ಜನರು ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪಾರ್ಟಿಯಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ನೋಟಿಸ್ ಜಾರಿ ಮಾಡಲು ಸಿಸಿಬಿ ಸಿದ್ಧತೆ ನಡೆಸಿದೆ.