ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಮರಳುವಂತೆ ಕೇಂದ್ರವು ಶನಿವಾರ ಪ್ರತಿಭಟನಾ ನಿರತ ವೈದ್ಯರಿಗೆ ಖಡಕ್ ಸೂಚನೆ ನೀಡಿದೆ.
ಭಾರತೀಯ ವೈದ್ಯಕೀಯ ಸಂಘ ಮತ್ತು ದೆಹಲಿಯ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ನಿವಾಸಿ ವೈದ್ಯರ ಸಂಘಗಳು ವ್ಯಕ್ತಪಡಿಸಿದ ಕಳವಳಗಳನ್ನು ಗಮನದಲ್ಲಿಟ್ಟುಕೊಂಡು, ಆರೋಗ್ಯ ವೃತ್ತಿಪರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಂತಹ ಎಲ್ಲಾ ಕ್ರಮಗಳನ್ನು ಸೂಚಿಸಲು ಸಮಿತಿಯನ್ನು ರಚಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕೋಲ್ಕತ್ತಾದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಮತ್ತು ನಂತರ ನಡೆದ ದಾಂಧಲೆ ವಿರುದ್ಧ ಪ್ರತಿಭಟನೆ ನಡೆಸಲು ಭಾರತೀಯ ವೈದ್ಯಕೀಯ ಸಂಘ ಆಗಸ್ಟ್ 17ರ ಶನಿವಾರ ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆಯವರೆಗೆ 24 ಗಂಟೆಗಳ ಕಾಲ ದೇಶಾದ್ಯಂತ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸಿ ಮುಷ್ಕರ ಕೈಗೊಂಡಿದೆ.