ಬೆಂಗಳೂರು : ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೂ ಬೇಸಿಗೆ ಕಾಲದಲ್ಲಿ ಕಚೇರಿ ಕೆಲಸದ ವೇಳೆಯನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ರವರು ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯತೆ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬೆಳಿಗೆ 8.00 ರಿಂದ 1.30 ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ.ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಗಿನಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025 ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬದಲಾಯಿಸಿ ಆದೇಶಿಸಿದೆ.
ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು. ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು ಎಂದು ಆದೇಶ ಹೊರಡಿಸಲಾಗಿದೆ.