ಬೆಂಗಳೂರು : ‘ಮುಡಾ ಹಗರಣ’ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರಿನಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಹಿನ್ನೆಲೆ ಹೈ ಅಲರ್ಟ್ ಘೋಷಿಸಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17 ಮತ್ತು ಭಾರತ್ ನ್ಯಾಯ ಸಂಹಿತಾದ ಸೆಕ್ಷನ್ 18 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಗೆಹ್ಲೋಟ್ ಅನುಮತಿ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆ ಸಚಿವರು ರಾಜಭವನ ಚಲೋ ಗೆ ಸಿದ್ದತೆ ನಡೆಸಿದ್ದಾರೆ. ರಾಜ್ಯಪಾಲರು ಆತುರದಿಂದ ವರ್ತಿಸಿ ಆದೇಶ ಹೊರಡಿಸಿದ್ದಾರೆ ಎಂದು ವಾದಿಸಿ ಆದೇಶದಲ್ಲಿ ನೀಡಲಾದ ತರ್ಕವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ.