ಮೈಸೂರು : ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಆಪರೇಷನ್ ಹಸ್ತದ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಸುಳಿವು ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ಸ್ವಾಗತ ಎಂದು ಹೇಳುವ ಮೂಲಕ ಪಕ್ಷಕ್ಕೆ ಬಹಿರಂಗವಾಗಿ ಆಹ್ವಾನಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ದಿವಾಳಿಯಾಗಿದೆ. ನಾವು ಅಧಿಕಾರಕ್ಕೆ ಬಂದು 3 ತಿಂಗಳಾಗಿದೆ. ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಮಾಡುತ್ತೇನೆ. ಆದರೆ ಪಕ್ಷದ ಸಿದ್ಧಾಂತ ಒಪ್ಪಿ ಬಂದ್ರೆ ಸ್ವಾಗತ ಎಂದು ಹೇಳಿದ್ದಾರೆ.
ಇಂದಿನಿಂದ ಮೂರು ದಿನ ಮೈಸೂರು ಜಿಲ್ಲೆ ಪ್ರವಾಸ ಕೈಗೊಂಡಿದ್ದೇನೆ. ಮೂರು ದಿನ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೇನೆ. ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುತ್ತೇವೆ. ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಸಹ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.