ಬೆಂಗಳೂರು : ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದು, ವಿಪಕ್ಷಗಳ ಟೀಕೆಗೆ, ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.
ಬಿಜೆಪಿಯವರು ಎಂದಾದರೂ ಜಿಲ್ಲೆ, ತಾಲ್ಲೂಕುಗಳಲ್ಲಿರುವ ಹಿಂದುಳಿದ ವರ್ಗಗಳ, ಎಸ್.ಸಿ, ಎಸ್.ಟಿ ಹಾಸ್ಟೆಲ್ಗಳಿಗೆ ಭೇಟಿ ನೀಡಿದ್ದಾರಾ? ಈ ಸಮುದಾಯದ ವಿದ್ಯಾರ್ಥಿಗಳ ಕಷ್ಟಗಳನ್ನು ಕೇಳಿದ್ದಾರಾ? ಅವರ ಸಂಕಷ್ಟಗಳಿಗೆ ಸ್ಪಂದಿಸಿದ್ದಾರಾ?
ಬಿಜೆಪಿ ಅವಧಿಯಲ್ಲಿ ಹಿಂದುಳಿದ ಸಮುದಾಯಗಳ ಏಳಿಗೆಗೆ ಬಿಡುಗಡೆ ಮಾಡಲಾದ ಅನುದಾನ ಮತ್ತು ನಮ್ಮ ಅವಧಿಯಲ್ಲಿ ನೀಡಿದ ಅನುದಾನದ ವ್ಯತ್ಯಾಸ ಎಷ್ಟು ಗೊತ್ತೆ? 2013 ರಿಂದ 2018 ರವರೆಗೆ ಪ್ರತೀ ವರ್ಷ ವಸತಿ ನಿಲಯಗಳ ಭೋಜನಾ ವೆಚ್ಚವನ್ನು ಹೆಚ್ಚಿಸಲಾಗಿದೆ. 2014 ರಲ್ಲಿ ಮೆಟ್ರಿಕ್ ಪೂರ್ವ ಹಾಸ್ಟೆಲ್ ವಿದ್ಯಾರ್ಥಿಗಳ ಭೋಜನಾ ವೆಚ್ಚ ತಲಾ 750 ರಿಂದ ರೂ.900ಕ್ಕೆ ಹೆಚ್ಚಿಸಿದ್ದು, ಮೆಟ್ರಿಕ್ ನಂತರದ ಭೋಜನಾ ವೆಚ್ಚ ತಲಾ 850 ರಿಂದ ರೂ.1,000 ಕ್ಕೆ ಹೆಚ್ವಿಸಲಾಯಿತು. ಈ ಮೊತ್ತ 2017-18 ಕ್ಕೆ ಕ್ರಮವಾಗಿ ಮೆಟ್ರಿಕ್ ಪೂರ್ವಕ್ಕೆ ರೂ.1,400 ಕ್ಕೆ, ಮೆಟ್ರಿಕ್ ನಂತರದ್ದು ರೂ.1,500 ಕ್ಕೆ ಹೆಚ್ಚಿಸಿದೆವು. ಆದರೆ ಬಿಜೆಪಿ 2019 ರಿಂದ 2022 ರ ವರೆಗೆ ಒಂದೇ ಒಂದು ರೂಪಾಯಿಯನ್ನೂ ಹೆಚ್ವಿಸಲಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು ತಲಾ ವಿದ್ಯಾರ್ಥಿಗೆ 650 ರೂ. ಹೆಚ್ಚಿಸಿದ್ದೇವೆ ಎಂದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲು ಶುರು ಮಾಡಿದ್ದೇವೆ. ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳಿಂದ ಕೋಟಿ, ಕೋಟಿ ಫಲಾನುಭವಿಗಳು ಅನುಕೂಲ ಪಡೆಯುತ್ತಿದ್ದಾರೆ. ರಾಜ್ಯದ ಜನರಿಗೆ ಅನ್ನ ಕೊಡುವ ಉದ್ದೇಶದಿಂದ ಕೆ.ಜಿ ಗೆ 34 ರೂಪಾಯಿ ಕೊಡ್ತೀವಿ, ಈ ಹಣಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಮನವಿ ಮಾಡಿದೆವು. ಆದರೆ ರಾಜ್ಯಕ್ಕೆ, ರಾಜ್ಯದ ಜನರಿಗೆ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಒಪ್ಪಲಿಲ್ಲ. ಈಗ 29 ರೂಪಾಯಿಗೆ ಅಕ್ಕಿ ಕೊಡುವುದಾಗಿ ಹೇಳುತ್ತಿದ್ದಾರೆ. ಈಗಲೂ ನಮಗೆ ಅದೇ ಬೆಲೆಗೆ ಅಕ್ಕಿ ಕೊಡಿಸಿ. ಅದನ್ನು ನಾವು ಕೇಂದ್ರದಿಂದ ಖರೀದಿಸಿ ರಾಜ್ಯದ ಜನರಿಗೆ ಕೊಡಲು ಸಿದ್ಧರಿದ್ದೇವೆ. ರಾಜ್ಯ ನಾಯಕರು ಕೇಂದ್ರದ ಜತೆ ಮಾತನಾಡಿ ನಮಗೆ ಅಕ್ಕಿ ಕೊಡಿಸಲು ತಯಾರಿದ್ದಾರ? ಎಂದು ಪ್ರಶ್ನಿಸಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸದನದಲ್ಲಿ ಬಿಜೆಪಿ ಪರ ವಕಾಲತ್ತು ವಹಿಸುತ್ತಾರೆ, ನಾಡಿಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಮಾತನಾಡುವುದಿಲ್ಲ. ರಾಜ್ಯದ ಪರವಾಗಿ, ರಾಜ್ಯದ ಜನರ ಪರವಾಗಿ ನಾವು ಕೇಂದ್ರಕ್ಕೆ ಸರಣಿ ಪತ್ರ ಬರೆದಿದ್ದೇವೆ. ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಜತೆ ಸಂಘರ್ಷಕ್ಕೆ ಇಳಿಯಬಾರದು ಎಂದಿದ್ದಾರೆ. ಆದರೆ ನಾವು ಸಂಘರ್ಷಕ್ಕೆ ಇಳಿದಿಲ್ಲ. ನ್ಯಾಯ ಕೇಳುತ್ತಿದ್ದೇವೆ.
ರಾಜ್ಯದ ಪಾಲಿನ ಸಂವಿಧಾನಬದ್ದ ಹಕ್ಕನ್ನು, ಅನುದಾನವನ್ನು ಕೇಳುವುದು ಸಂಘರ್ಷ ಆಗುತ್ತದೆಯಾ? ರಾಜ್ಯಕ್ಕೆ ತೀವ್ರ ಬರಗಾಲ ಬಂದಿದೆ. ಕೇಂದ್ರದಿಂದ ಬರ ಪರಿಹಾರ ಕೇಳಿ 17 ಬಾರಿ ಕೇಂದ್ರಕ್ಕೆ ಪತ್ರ ಬರೆದೆವು. ಇದರಲ್ಲಿ ಒಂದು ಪತ್ರಕ್ಕೆ ಮಾತ್ರ, “ನಿಮ್ಮ ಪತ್ರ ತಲುಪಿದೆ” ಎನ್ನುವ ಉತ್ತರ ಬಂತು. ಆದರೆ ಉಳಿದ 16 ಪತ್ರಗಳಿಗೆ ಉತ್ತರವೂ ಬರಲಿಲ್ಲ. ಕೇಂದ್ರದ ಅನುದಾನ ರಾಜ್ಯಕ್ಕೆ ಇವತ್ತಿನವರೆಗೂ ಒಂದು ಪೈಸೆಯೂ ಬಂದಿಲ್ಲ. ಇದು ನಿಯಮಬದ್ದವಾಗಿ ರಾಜ್ಯದ ಹಕ್ಕು, ರಾಜ್ಯದ ಪಾಲು. ಇದನ್ನೂ ಕೇಂದ್ರ ಕೊಡುತ್ತಿಲ್ಲ. ನಮ್ಮ ಪಾಲನ್ನು, ರಾಜ್ಯದ ಪಾಲನ್ನು ಕೇಳುವುದು ತಪ್ಪಾ? ಇದು ಸಂಘರ್ಷವೇ? ರಾಜ್ಯಕ್ಕೆ ಬರಗಾಲ ಬಂದಾಗ ನರೇಗಾ ಮಾನವ ದಿನಗಳನ್ನು ನಿಯಮ ಬದ್ಧವಾಗಿ 100 ರಿಂದ 150 ದಿನಗಳಿಗೆ ಏರಿಕೆ ಮಾಡಬೇಕಿತ್ತು. ಇದಕ್ಕಾಗಿ ನಾವು ಪದೇ ಪದೇ ಮನವಿ ಮಾಡಿದರೂ ಮಾನವ ದಿನಗಳನ್ನು ಏರಿಕೆ ಮಾಡಲೇ ಇಲ್ಲ. ಇದು ರಾಜ್ಯದ ಜನರಿಗೆ ಮಾಡಿದ ಅನ್ಯಾಯ ಅಲ್ಲವೇ? ನಮ್ಮ ರಾಜ್ಯದ ಹಕ್ಕನ್ನು ಕೇಳುವುದು ತಪ್ಪಾ? ಎಂದು ಪ್ರಶ್ನಿಸಿದರು.
ನಮ್ಮ ಸರ್ಕಾರದ ಅವಧಿಯಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಕೊಟ್ಟಿದ್ದು 408.02 ಕೋಟಿ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ 880.65 ಕೋಟಿ ಸೇರಿ ಒಟ್ಟು ರೂ. 1,288.67 ಕೋಟಿ ಕೊಟ್ಟೆವು. ಆದರೆ ಬಿಜೆಪಿ ಸರ್ಕಾರ ತಮ್ಮ ಅವಧಿಯಲ್ಲಿ ಕೊಟ್ಟ ವಿದ್ಯಾರ್ಥಿ ವೇತನ ಕೇವಲ ರೂ. 650.78 ಕೋಟಿ ಮಾತ್ರ. ವಿದ್ಯಾಸಿರಿ ಯೋಜನೆಗೆ ನಮ್ಮ ಅವಧಿಯಲ್ಲಿ ರೂ.431.68 ಕೋಟಿ ಕೊಟ್ಟರೆ, ಬಿಜೆಪಿ ತನ್ನ ಅವಧಿಯಲ್ಲಿ ಕೊಟ್ಟಿದ್ದು 197.62 ಕೋಟಿ ಮಾತ್ರ. ನಮ್ಮ ಅವಧಿಯಲ್ಲಿ 308 ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಹೊಸ ಹಾಸ್ಟೆಲ್ ಗಳನ್ನು ತೆರೆದು 30,800 ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಿದೆವು. ಬಿಜೆಪಿ ತನ್ನ ಅವಧಿಯಲ್ಲಿ ಕೇವಲ 5 ಹಾಸ್ಟೆಲ್ ಗಳನ್ನು ತೆರೆದು 500 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಿತು. ನಮ್ಮ ಸರ್ಕಾರದ 2013-18 ರ ಅವಧಿಯಲ್ಲಿ 328 ಮೊರಾರ್ಜಿ ವಸತಿ ಶಾಲೆಗಳನ್ನು ತೆರೆದು 82,000 ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅವಕಾಶ, ಶಿಕ್ಷಣ ಒದಗಿಸಿತು. ಬಿಜೆಪಿ 14 ವಸತಿ ಶಾಲೆ ತೆರೆದು 3,500 ವಿದ್ಯಾರ್ಥಿಗಳಿಗೆ ಅವಕಾಶ ಸಿಕ್ಕಿದೆ. ಶೋಷಿತ ಜನರ ಬಗ್ಗೆ ನನಗೆ ಮತ್ತು ನಮ್ಮ ಸರ್ಕಾರಕ್ಕೆ ಇರುವ ಕಾಳಜಿ ಬಗ್ಗೆ ವ್ಯಂಗ್ಯವಾಡುವ ಮೊದಲು ವಿಪಕ್ಷ ನಾಯಕರಾದ ಅಶೋಕ್ ಅವರು ನೀವೇನು ಮಾಡಿದ್ದೀರಿ? ಎಂದು ಆತ್ಮಾವಲೋಕನ ಮಾಡಿಕೊಳ್ಳಿ ಎಂದಿದ್ದಾರೆ.
ಬಿಜೆಪಿ ಸರ್ಕಾರದ್ದು 2019 ರಿಂದ 2023ರ ವರೆಗೆ ದ್ವೇಷ ತುಂಬಿದ, ತುಕ್ಕು ಹಿಡಿದ ಬಸ್ಸು ಮುಂದಕ್ಕೆ ಹೋಗಲೇ ಇಲ್ಲ. ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು. ನಮ್ಮ ಸರ್ಕಾರದ ಅವಧಿಯಲ್ಲಿ ಬಿಜೆಪಿ ಸರ್ಕಾರಕ್ಕಿಂತಲೂ ಹೆಚ್ಚಿನ ಹಾಲು ಉತ್ಪಾದನೆಯಾಗಿದೆ. 2023- 24 ರಲ್ಲಿ 84.41 ಲಕ್ಷ ಲೀಟರ್ ಹಾಲು ಹೆಚ್ಚು ಉತ್ಪಾದನೆಯಾಗಿದೆ ಎಂದು ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕರು ಪತ್ರದಲ್ಲಿ ತಿಳಿಸಿದ್ದಾರೆ. ರೈತರಿಗೆ ನೀಡಬೇಕಿದ್ದ ಪ್ರೋತ್ಸಾಹ ಧನಕ್ಕಾಗಿ 2019 ರಿಂದ ಇಲ್ಲಿಯವರೆಗೆ 1,178 ಕೋಟಿ ರೂ.ಗಳು ಬಿಡುಗಡೆಯಾಗಿದೆ. ಈ ವರ್ಷ 1,172 ಕೋಟಿ ರೂ.ಗಳಲ್ಲಿ 971 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ರೈತರಿಗೆ 3 ರೂ. ಗಳಿಂದ 5 ರೂ.ಗಳಿಗೆ ಪ್ರೋತ್ಸಾಹ ಧನ ಹೆಚ್ಚಿಸಿದ್ದು ನಮ್ಮ ಸರ್ಕಾರ ಎಂದಿದ್ದಾರೆ.
ರಾಜ್ಯಪಾಲರು ತಮ್ಮ ಭಾಷಣದಲ್ಲಿ ಸರ್ಕಾರದ ನಿಲುವು, ನೀತಿ, ಮುನ್ನೋಟ ಹಾಗೂ ಕಾರ್ಯಕ್ರಮಗಳನ್ನು ಸ್ಪಷ್ಟವಾಗಿ ರಾಜ್ಯದ ಜನತೆ ಮುಂದಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಸದನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರಿಗೆ ಅಭಿನಂದನೆಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.