ಬೆಂಗಳೂರು : ರಾಜಸ್ಥಾನದಿಂದ ಕಲಬೆರಕೆ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ಹಿಂದೂಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಗೆ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ರಾಜಸ್ಥಾನದಿಂದ ಕಲಬೆರಕೆ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ಬಂಧನವಾಗಿತ್ತು. ಇಂದು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಬಿಡುಗಡೆ ಬಳಿಕ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ಪ್ರತಿ ತಿಂಗಳ ಮೊದಲ ಭಾನುವಾರದಂದು ಠಾಣೆಗೆ ಹಾಜರಾಗಿ ಸಹಿ ಮಾಡಬೇಕು, ವಿಚಾರಣೆ ಮುಗಿಯುವ ತನಕ ದೇಶಬಿಟ್ಟು ಹೋಗಬಾರದು, ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂದು ಷರತ್ತು ವಿಧಿಸಿ ಕೋರ್ಟ್ ಜಾಮೀನು ನೀಡಿದೆ.
ಅಕ್ರಮವಾಗಿ ಮಾಂಸ ಮಾರಾಟದ ಬಗ್ಗೆ ಮೆಜೆಸ್ಟಿಕ್ ರೈಲು ನಿಲ್ದಾಣ ಬಳಿ ಪ್ರತಿಭಟನೆ ನಡೆಸಿ ಗಲಾಟೆ ಮಾಡುತ್ತಿದ್ದ ಆರೋಪದಲ್ಲಿ ಪುನೀತ್ ಕೆರೆಹಳ್ಳಿ ಹಾಗೂ ಸಹಚರರನ್ನು ಬಂಧಿಸಲಾಗಿತ್ತು..ಗುಂಪುಗೂಡಿ ಗಲಾಟೆ, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ ಮೂರನೇ ಎಫ್ ಐಆರ್ ದಾಖಲಿಸಿ ಕಾಟನ್ ಪೇಟೆ ಪೊಲೀಸರು ತನಿಖೆ ನಡೆಸಿದ್ದರು.