ನವದೆಹಲಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಕಳೆದ ಕೆಲ ತಿಂಗಳಿನಿಂದ ಬಿಜೆಪಿ ಕಾರ್ಯಕರ್ತರು, ಮುಖಂಡರು, ನಾಯಕರು ಬಿಜೆಪಿಗೆ ಮರಳಿ ಬರಬೇಕು ಎಂದು ಅಪೇಕ್ಷೆಯಿತ್ತು. ಹೀಗಾಗಿ ನಾನು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಅಮಿತ್ ಶಾ ಅವರು ತುಂಬ ಸಂತೋಷದಿಂದ ಬರಮಾಡಿಕೊಂಡಿದ್ದಾರೆ ಎಂದರು.
ಕಾಂಗ್ರೆಸ್ ಸದಸ್ಯತ್ವ ಹಾಗೂ ವಿಧಾನಪರಿಷತ್ ಸ್ಥಾನಕ್ಕೂ ನಾನು ರಾಜೀನಾಮೆ ನೀಡಿದ್ದೇನೆ. ಇ-ಮೇಲ್ ಮೂಲಕ ರಾಜೀನಾಮೆ ರವಾನಿಸಿದ್ದೇನೆ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದ್ದಾರೆ.
ಬಳಿಕ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ನಮ್ಮ ಕಾರ್ಯಕರ್ತರ ಅಪೇಕ್ಷೆಯಿತ್ತು. ಅದಕ್ಕಾಗಿ ಬೆಳಗ್ಗೆ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವು. ಅವರು ಸಂತೋಷವಾಗಿ ಬಿಜೆಪಿಗೆ ಸೇರ್ಪಡೆಗೆ ಸ್ವಾಗತ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದು, ಪಕ್ಷಕ್ಕೆ ಬಲ ಬಂದಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದರು.
ಜಗದೀಶ್ ಶೆಟ್ಟರ್ ಅವರು ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಮತ್ತೆ ಬಿಜೆಪಿಗೆ ಕರೆತರಲು ಹೈಕಮಾಂಡ್ ನಿರ್ಧರಿಸಿತ್ತು.