ಬೆಂಗಳೂರು : ರಾಜ್ಯದಲ್ಲಿ ‘ಯುವನಿಧಿ’ ಯೋಜನೆಗೆ ನೋಂದಣಿ ಆರಂಭವಾದ ಬೆನ್ನಲ್ಲೇ ನಿರುದ್ಯೋಗಿಗಳಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ.
ಮುಂದಿನ ತಿಂಗಳಿನಲ್ಲಿ ಬೆಂಗಳೂರಿನಲ್ಲೇ ರಾಜ್ಯದ ಮಟ್ಟದ ‘ಉದ್ಯೋಗ ಮೇಳ’ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ ಎಂದು ತಿಳಿದು ಬಂದಿದೆ. ಸರ್ಕಾರದ ವತಿಯಿಂದಲೇ ಈ ಉದ್ಯೋಗ ಮೇಳ ನಡೆಯಲಿದ್ದು, ಈ ಮೂಲಕ ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರು ಬೆಂಗಳೂರಿನಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಕೆಲಸ ಗಿಟ್ಟಿಸಿಕೊಳ್ಳಬಹುದಾಗಿದೆ.
ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ನಡೆಸಿ, ಚರ್ಚಿಸಲಾಯಿತು. ಸಭೆಯಲ್ಲಿ ಉದ್ಯೋಗ ಮೇಳದ ಯಶಸ್ವಿ ಆಯೋಜನೆಗಾಗಿ ಆರು ಸಚಿವರನ್ನು ಒಳಗೊಂಡ ಸಮಿತಿ ರಚನೆಗೆ ನಿರ್ಧರಿಸಲಾಯಿತು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.