ಬೆಂಗಳೂರು : ರಾಜ್ಯದ ‘ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, 5 ಸಾವಿರ ವೇತನ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ.
ಈ ಬಗ್ಗೆ ಇಂದು ವಿಕಾಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅತಿಥಿ ಉಪನ್ಯಾಸಕರು ಹಲವು ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿದ್ದರು. ಅಲ್ಲದೇ ಮನವಿ ಮಾಡಿದ್ದರು. ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಹೆಚ್ಚಳ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಕೂಡ ಒಪ್ಪಿಗೆ ನೀಡಿದ್ದಾರೆ ಎಂದರು.
ಅತಿಥಿ ಉಪನ್ಯಾಸಕರಿಗೆ ವೇತನ ಸಹಿತ ತಿಂಗಳಿಗೆ ಒಂದು ರಜೆ ನೀಡಲಾಗುವುದು. 60 ವರ್ಷ ಪೂರೈಸಿದಂತ ಅತಿಥಿ ಉಪನ್ಯಾಸಕರಿಗೆ ಕೆಲಸ ಬಿಡುವಾಗ 5 ಲಕ್ಷ ನೀಡಲು ತೀರ್ಮಾನಿಸಲಾಗಿದೆ. ಅಲ್ಲದೇ ನೌಕರರಿಗೆ ಆರೋಗ್ಯ ವಿಮಾ ಯೋಜನೆ ಕೂಡ ಜಾರಿಗೊಳಿಸಲಾಗುತ್ತಿದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದಂತ ಅತಿಥಿ ಉಪನ್ಯಾಸಕರನ್ನು ಪರಿಗಣಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಹೇಳಿದರು.
ವೇತನ ಹೆಚ್ಚಳ, ಹುದ್ದೆ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದರು. ಸದ್ಯ, ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಶೀಘ್ರದಲ್ಲೇ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ .