ಬೆಂಗಳೂರು : ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಸಂಬಂಧ ಒಂದು ಟ್ವೀಟ್ ಡಿಲೀಟ್ ಆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮತ್ತೊಂದು ಟ್ವೀಟ್ ಮಾಡಿದ್ದಾರೆ.
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಕುರಿತು ಸಿಎಂ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್ ಡಿಲೀಟ್ ಆಗಿದ್ದು, ಹಲವು ಚರ್ಚೆಗಳಿಗೆ ಕಾರಣವಾಗಿತ್ತು. ಉದ್ಯಮಿಗಳ ಒತ್ತಡಕ್ಕೆ ಟ್ವೀಟ್ ಡಿಲೀಟ್ ಮಾಡಲಾಯಿತಾ ಎಂಬ ಪ್ರಶ್ನೆ ಕೂಡ ಹುಟ್ಟಿಕೊಂಡಿತ್ತು. ಈ ವಿಚಾರ ಸುದ್ದಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಟ್ವೀಟ್ ಮಾಡಿದ್ದಾರೆ.