ಮಂಡ್ಯ : ಸಂಸದೆ ಸುಮಲತಾ ಅಂಬರೀಷ್ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.
ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರ ಜೊತೆ ಸಂಸದೆ ಸುಮಲತಾ ಅಂಬರೀಷ್ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ಅವರಿಗೆ ಪಕ್ಷದ ಬಾವುಟ ನೀಡಿ ಬಿಜೆಪಿ ಪಕ್ಷಕ್ಕೆ ಸ್ವಾಗತ ಕೋರಲಾಯಿತು.
ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ, ಬಿ.ವೈ ವಿಜಯೇಂದ್ರ, ಆರ್ ಅಶೋಕ್, ಸೇರಿದಂತೆ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. ಮಂಡ್ಯ ಕ್ಷೇತ್ರದಲ್ಲಿ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಜೆಡಿಎಸ್ ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರಿಂದ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಿದ್ದು, ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಸುಮಲತಾ ಮಂಡ್ಯದಲ್ಲಿ ಈ ಬಾರಿ ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡುತ್ತಿದ್ದಾರೆ.
ಇಂದಿನಿಂದ ನನ್ನ ಹೊಸ ಅಧ್ಯಾಯ ಆರಂಭ : ಸುಮಲತಾ ಅಂಬರೀಷ್
ಇಂದಿನಿಂದ ನನ್ನ ಹೊಸ ಅಧ್ಯಾಯ ಆರಂಭವಾಗಲಿದೆ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ. ಅಂಬರೀಷ್ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಂಬರೀಷ್ ಆಶೀರ್ವಾದ ಪಡೆದು ಮುಂದುವರೆಯುತ್ತೇನೆ, ಒಳ್ಳೆ ಕಾರ್ಯಕ್ಕೆ ಅವರ ಆಶೀರ್ವಾದ ಇರುತ್ತದೆ ಎಂದರು.