ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ.
ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಿಸಿ ಎಂದು ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇತ್ತೀಚೆಗೆ ದೂರು ದಾಖಲಾಗಿತ್ತು.ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ದೇವರಾಜು ಹಾಗೂ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂಡಾಗೆ ವಂಚಿಸಿದ್ದಾರೆ ಎಂದು ದೂರಿದ್ದರು.
ಮುಡಾ ಹಗರಣ ವಿಪಕ್ಷಗಳಿಗೆ ದೊಡ್ಡ ಅಸ್ತ್ರವಾಗಿದ್ದು, ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್-ಬಿಜೆಪಿ ಪಕ್ಷಗಳು ಪಾದಯಾತ್ರೆ ಹೊರಟಿದೆ.