ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ವಿಧಿವಶರಾಗಿದ್ದಾರೆ.
ಅಪಘಾತದಿಂದ ಗಂಭೀರ ಸ್ಥಿತಿ ತಲುಪಿದ್ದ ಸಂಚಾರಿ ವಿಜಯ್ ಅವರನ್ನು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿದ್ದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ರಕ್ತಸ್ರಾವವಾಗಿದ್ದರಿಂದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ ಇಂದು ಮುಂಜಾನೆ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಉಸಿರಾಟ ಕೂಡ ಕ್ಷೀಣಿಸಲು ಆರಂಭಿಸಿತ್ತು. ವಿಜಯ್ ಬದುಕುವ ಸಾಧ್ಯತೆ ಕಡಿಮೆ ಎಂದು ವೈದ್ಯರು ಘೋಷಿಸಿದ್ದರು. ಇದರ ಬೆನ್ನಲ್ಲೇ ಸಂಚಾರಿ ವಿಜಯ್ ಕುಟುಂಬದವರು ಅವರ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದರು. ಅದರಂತೆ ಇದೀಗ ವಿಜಯ್ ಅಂಗಾಂಗ ದಾನ ಮಾಡಲಾಗಿದ್ದು, ಬೇರೆಯವರಿಗೆ ಅಂಗಾಂಗ ಕಸಿ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಜೆಫ್ ಬೆಜ಼ೋಸ್ ಜೊತೆಗೆ ಬಾಹ್ಯಾಕಾಶ ಟ್ರಿಪ್ ಗೆ 205 ಕೋಟಿ ರೂ. ತೆರಲು ಮುಂದಾದ ಅನಾಮಧೇಯ
ಎರಡು ದಿನಗಳ ಹಿಂದೆ ಸ್ನೇಹಿತನ ಜೊತೆ ಸಾಗುತ್ತಿದ್ದಾಗ ಬೈಕ್ ಅಪಘಾತಕ್ಕಿಡಾಗಿದ್ದ ಸಂಚಾರಿ ವಿಜಯ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪ್ರತಿಭಾವಂತ ನಟನ ಅಗಲಿಕೆಗೆ ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ.
ಇದೇ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಟ ಸಂಚಾರಿ ವಿಜಯ್ ಅಗಲಿಕೆಗೆ ಸಂತಾಪ ಸೂಚಿಸಿದ್ದು, ಪ್ರತಿಭಾವಂತ ನಟ ಅಪಘಾತದಲ್ಲಿ ಸಾವನ್ನಪ್ಪಿರುವುದು ದುಃಖ ತಂದಿದೆ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.