ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ -2022 ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ರಾಷ್ಟ್ರಪತಿಯಿಂದ ನಾಡಹಬ್ಬ ಮೈಸೂರು ದಸರಾಗೆ ಚಾಲನೆ ದೊರೆತಿರುವುದು ವಿಶೇಷ.
ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಸಾಂಪ್ರದಾಯಿಕವಾಗಿ ಅರಮನೆಗೆ ಮಾತ್ರ ಸೀಮಿತವಾಗಿದ್ದ ಮೈಸೂರು ದಸರಾ ಮಹೋತ್ಸವ ಈ ಬಾರಿ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, 412ನೇ ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡಿ ದೇವಿಗೆ ದೀಪ ಬೆಳಗಿ, ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಬೆಳಿಗ್ಗೆ 9:45ರಿಂದ 10 ಗಂಟೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ, ಬ್ರಾಹ್ಮಿ ಅಲಂಕೃತಳಾಗಿರುವ ನಾಡ ಅದಿದೇವತೆ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅದ್ದೂರಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್, ಸಿಎಂ ಬಸವರಾಜ್ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಹಲವರು ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡಿದರು.
ವೇದಿಕೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ್ ಬೊಮ್ಮಾಯಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಚಿವ ಸುನೀಲ್ ಕುಮಾರ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಷಿ ಸೇರಿದಂತೆ 14 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, 600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೇ ಆಯ್ದ ಗಣ್ಯರಿಗೆ ಮಾತ್ರ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನೀಡಲಾಗಿದೆ. ಸಲಾಗಿದೆ. ಇನ್ನು ಇಂದು ಬೆಳಿಗ್ಗೆ 11 ಗಂಟೆಗೆ ರಾಜವಂಶಸ್ಥ ಯದುವೀರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ.