ಬೆಂಗಳೂರು: ಸಾರಿಗೆ ನೌಕರರು ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಮುಷ್ಕರ ನಾಳೆಯಿಂದ ಮತ್ತಷ್ಟು ತೀವ್ರಗೊಳ್ಳಲಿದೆ. ಈ ಮೂಲಕ ಸರ್ಕಾರ ಹಾಗೂ ಸಾರಿಗೆ ನೌಕರರ ಸಮರ ಇನ್ನಷ್ಟು ಭುಗಿಲೇಳುವ ಸಾಧ್ಯತೆ ದಟ್ಟವಾಗಿದೆ.
ಸಿಎಂ ಬಿ.ಎಸ್.ಯಡಿಯೂರಪ್ಪನವರು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದುರುದ್ದೇಶದಿಂದಲೇ ಮುಷ್ಕರ ಆರಂಭವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಬೆನ್ನಲ್ಲೇ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದ ಸಾರಿಗೆ ನೌಕರರು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಸಾರಿಗೆ ನೌಕರರ ಸಂಘದ ಹೋರಾಟದ ಗೌರವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದರು. ಇದರ ಬೆನ್ನಲ್ಲೇ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರ ಜೊತೆ ಸಭೆ ಕರೆದು ಮುಂದಿನ ಹೋರಾಟದ ರೂಪುರೇಷೆ ಚರ್ಚಿಸಿದ್ದಾರೆ.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದ್ದು, ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ತಿಳಿಸಿದ್ದಾರೆ. ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ನಾಳೆ ಬೆಳಿಗ್ಗೆಯಿಂದ ಉಪವಾಸ ಸತ್ಯಾಗ್ರಹ ಆರಂಭವಾಗಲಿದೆ ಎಂದು ಹೇಳಿದ್ದಾರೆ.