ಶಿಮ್ಲಾ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದರೆ, ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಹಿನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ಹಿಮಾಚಲ ಪ್ರದೇಶದ ಸಿಎಂ ಜೈರಾಮ್ ಠಾಕೂರ್ ತಮ್ಮ ಕ್ಷೇತ್ರ ಸೆರಾಜ್‌ನಿಂದ 38,183 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ. ಆದರೆ ಬಿಜೆಪಿಗೆ ಸೋಲು ಖಚಿತವಾಗುತ್ತಿದ್ದಂತೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜೈರಾಮ್ ಠಾಕೂರ್, ಕೆಲ ಸಮಯದಲ್ಲಿಯೇ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಬಿಜೆಪಿ 27 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.