ಬೆಂಗಳೂರು : ರಾಜ್ಯದಲ್ಲಿ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಲಾಗಿದ್ದು, ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಶ್ಠಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅನುಮತಿ ನೀಡಬೇಕು. ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗಬಾರದು. ಪಟಾಕಿ ಅವಘಡ ನಡೆಯದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.