ಬೆಂಗಳೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಓರ್ವನನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ.
ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬೆಂಗಳೂರಿನ 39 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಆರೋಪಿ ನಾಶಿಪುಡಿಯನ್ನು ಪೊಲೀಸ್ ಕಸ್ಟಡಿಗೆ ನೀಡಿ ಹಾಗೂ ಮುನಾವರ್ ಹಾಗೂ ಇಲ್ತಾಜ್ ಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಇತ್ತೀಚೆಗಷ್ಟೇ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು, ವಿವಾದಕ್ಕೆ ಕಾರಣವಾಗಿತ್ತು. ರಾಜಕೀಯ ಆರೋಪ ಪ್ರತ್ಯಾರೋಪಗಳ ನಡುವೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಎಫ್.ಎಸ್.ಎಲ್. ವರದಿ ಆಧರಿಸಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪಾಕ್ ಪರ ಘೋಷಣೆ ವಿಚಾರ ರಾಜಕೀಯ ವಾಕ್ಸಮರಗಳಿಗೆ ಕಾರಣವಾಗಿತ್ತು. ಆರೋಪಿಗಳನ್ನು ಬಂಧಿಸುವಂತೆ ಭಾರಿ ಆಗ್ರಹ ವ್ಯಕ್ತವಾಗಿತ್ತು.