ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ಕೋರ್ಟ್ ಗೆ ಹಾಜರಾಗಿದ್ದರು. ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಆದರೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿರಲಿಲ್ಲ, ಈ ಹಿನ್ನೆಲೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ರಾಹುಲ್ ಗಾಂಧಿಗೆ ಹಾಜರಾತಿಯಿಂದ ವಿನಾಯಿತಿ ನೀಡಿ ಜೂನ್ 7 ರಂದು ತಪ್ಪದೇ ಕೋರ್ಟ್ ಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಚುನಾವಣೆ ವೇಳೆ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ, ಭ್ರಷ್ಟಾಚಾರದ ದರಪಟ್ಟಿಯ ಜಾಹೀರಾತನ್ನು ಕಾಂಗ್ರೆಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕರು ಮಾನನಷ್ಟ ಮೊಕದ್ದಮೆ ಸಲ್ಲಿಸಿ, ಕೋರ್ಟ್ ಮೆಟ್ಟಿಲೇರಿದ್ದರು. ಈ ನಿಟ್ಟಿನಲ್ಲಿ ಕೋರ್ಟ್ ಮೂವರು ನಾಯಕರಿಗೆ ಸಮನ್ಸ್ ಜಾರಿ ಮಾಡಿ ಖುದ್ದು ಹಾಜರಾಗಿ ಸ್ಪಷ್ಟನೆ ನೀಡುವಂತೆ ಸೂಚಿಸಿತ್ತು.