ನವದೆಹಲಿ: ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆ 2022 ಕ್ಕೆ ಮೋಸದಿಂದ ಹಾಜರಾದ ಆರೋಪದ ಮೇಲೆ ಮಾಜಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರ ಬಂಧನಕ್ಕೆ ಸುಪ್ರೀಂ ಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ.
ನಿರೀಕ್ಷಣಾ ಜಾಮೀನು ಕೋರಿ ಪೂಜಾ ಖೇಡ್ಕರ್ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರು ಮತ್ತು ಯುಪಿಎಸ್ಸಿಗೆ ನೋಟಿಸ್ ನೀಡಿದ್ದು, ಮುಂದಿನ ವಿಚಾರಣೆಯ ದಿನಾಂಕದವರೆಗೆ ರಕ್ಷಣೆ ಕಾರ್ಯನಿರ್ವಹಿಸುವಂತೆ ನಿರ್ದೇಶಿಸಿದೆ. ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ಫೆಬ್ರವರಿ 14 ಕ್ಕೆ ಮುಂದೂಡಿತು.
ದೈಹಿಕ ನ್ಯೂನ್ಯತೆ ಬಗ್ಗೆ ಸುಳ್ಳು ಹೇಳಿ, ನಕಲಿ ಒಬಿಸಿ ಪ್ರಮಾಣ ಪತ್ರ ಮಾಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಪೂಜಾಖೇಡ್ಕರ್ ಸುದ್ದಿಯಾಗಿದ್ದರು. ದೆಹಲಿ ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಜಾಮೀನು ಮಂಜೂರು ಮಾಡಲು ನಿರಾಕರಿಸಿತ್ತು . ನಂತರ ಪೂಜಾ ಬಂಧನಕ್ಕೆ ಪೊಲೀಸರು ಸಿದ್ದತೆ ನಡೆಸಿದ್ದರು.