ಬೆಂಗಳೂರು: ನಾಳೆಯಿಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿಧಾನ ಮಂಡಲ ಅಧಿವೇಶ ಆರಂಭವಾಗುತ್ತಿದ್ದು, ಇನ್ನೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ, ಇದೇ ವಿಚಾರವಾಗಿ ಕಾಂಗ್ರೆಸ್ ಬಿಜೆಪಿ ನಾಯಕರನ್ನು ಟೀಕಿಸುತ್ತಿದೆ.
ಈ ನಡುವೆ ವಿಪಕ್ಷ ನಾಯಕನ ಆಯ್ಕೆ ಕಸರತ್ತು ಚುರುಕುಗೊಳಿಸಿರುವ ಬಿಜೆಪಿ ಇಂದು ಸಂಜೆ ಅಥವಾ ನಾಳೆ ವಿಪಕ್ಷ ನಾಯಕನ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ.
ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ವರಿಷ್ಠರ ಜೊತೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಿದ್ದು, ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನಿವಾಸದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಈ ವೇಳೆ ಯಡಿಯೂರಪ್ಪ ವಿಪಕ್ಷ ನಾಯಕನ ಸ್ಥಾನಕ್ಕೆ ಯಾರ ಹೆಸರನ್ನು ಸೂಚಿಸಲಿದ್ದಾರೆ ಎಂಬುದೇ ಕುತೂಹಲವಾಗಿದೆ.