ಸುಧೀರ್ಘ ಚುನಾವಣೆ ರಾಜಕೀಯದ ನಂತರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚುನಾವಣೆ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟು ಕೊಡುವುದಾಗಿ ಹೇಳುವ ಮೂಲಕ ರಾಜಕೀಯ ದಾಳ ಉರುಳಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಜಯೇಂದ್ರ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿತ್ತು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ನಿರೀಕ್ಷೆಯಲ್ಲಿದ್ದ ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡಲಾಗಿತ್ತು. ಆದರೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಉಪಚುನಾವಣೆಗಳ ನಡೆದ ಕ್ಷೇತ್ರಗಳ ಉಸ್ತುವಾರಿ ವಹಿಸಿಕೊಂಡ ವಿಜಯೇಂದ್ರ ಬಿಜೆಪಿ ಗೆಲ್ಲದ ಕ್ಷೇತ್ರಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಮೈಸೂರು, ಮಂಡ್ಯ ಭಾಗದ ವಿವಿಧ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಒತ್ತಡವೂ ಅವರಿಗಿತ್ತು. ಆದರೆ ಅವಕಾಶ ಸಿಕ್ಕಿರಲಿಲ್ಲ. ವಿಧಾನ ಪರಿಷತ್ ಸದಸ್ಯ ಸ್ಥಾನವೂ ದೊರಕಲಿಲ್ಲ. ಸಂಪುಟಕ್ಕೆ ಸೇರಲಿದ್ದಾರೆ ಎಂದು ಹೇಳಲಾಗಿದ್ದರೂ ಅದಕ್ಕೂ ಅವಕಾಶ ನೀಡಲಿಲ್ಲ. ವಿಜಯೇಂದ್ರಗೆ ಕ್ಷೇತ್ರ ಬಿಟ್ಟುಕೊಟ್ಟರೆ ಈ ಸಮಸ್ಯೆಗೆ ಉದ್ಭವಿಸುವುದಿಲ್ಲ ಎಂದು ಯಡಿಯೂರಪ್ಪ ತಾವು ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರವನ್ನೇ ಬಿಟ್ಟು ಕೊಟ್ಟಿದ್ದಾರೆ. ಈ ಮೂಲಕ ವಿಜಯೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದಿದ್ದಾರೆ. ಯಡಿಯೂರಪ್ಪ ಅವರನ್ನು ದೂರವಿಟ್ಟು ಚುನಾವಣೆ ಎದುರಿಸಿದರೆ ಬಿಜೆಪಿಗೆ ಹಿನ್ನಡೆ ಗ್ಯಾರಂಟಿ ಇದನ್ನು ಅರಿತುಕೊಂಡಿರುವ ಪಕ್ಷದ ವರಿಷ್ಠರು ಯಡಿಯೂರಪ್ಪ ಅವರ ಮಾತಿಗೆ ಮಣೆ ಹಾಕುವ ಸಾಧ್ಯತೆ ಇದೆ. ಚುನಾವಣೆಗೆ ಇನ್ನು 9 ತಿಂಗಳು ಇರುವಾಗಲೇ ಪುತ್ರನಿಗೆ ಟಿಕೆಟ್ ಘೋಷಿಸುವ ಮೂಲಕ ಯಡಿಯೂರಪ್ಪ ರಾಜಕೀಯ ದಾಳ ಉರುಳಿಸಿದ್ದಾರೆ. ಈ ಮೂಲಕ ವರಿಷ್ಠರ ಮೇಲೆ ಒತ್ತಡ ತಂತ್ರ ಅನುಸರಿಸಿದ್ದಾರೆ ಎಂದು ಹೇಳಲಾಗುತ್ತಿದೆ.