ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಕಳೆದ ಚುನಾವಣೆಯಲ್ಲಿ ಬಿ.ಎಸ್.ಪಿ. ಒಂದು ಸ್ಥಾನ ಗಳಿಸಿತ್ತು. ಈ ಬಾರಿ ಹೆಚ್ಚಿನ ಸ್ಥಾನ ಗಳಿಸಲು ಪಕ್ಷ ಕಾರ್ಯತಂತ್ರ ರೂಪಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಪಕ್ಷದ ನಾಯಕಿ ಮಾಯಾವತಿ, ಕರ್ನಾಟಕ ರಾಜ್ಯ ವಿಧಾನಸಭೆಗೆ ಸದ್ಯದಲ್ಲೇ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎಸ್ಪಿ ಸ್ವಂತ ಬಲದ ಮೇಲೆ ಸ್ಪರ್ಧಿಸಲಿದ್ದು, ಇದಕ್ಕೆ ಸಿದ್ಧತೆ ಸಂಬಂಧ ಇಂದು ದೆಹಲಿಯಲ್ಲಿ ರಾಜ್ಯದ ಜವಾಬ್ದಾರಿ ಹೊಂದಿದ ನಾಯಕರು, ವರಿಷ್ಠರೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಶೇ.60ರಷ್ಟು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಆಯ್ಕೆಯಾದ ಬಿಎಸ್ಪಿ ಅಭ್ಯರ್ಥಿಗಳ ಪಟ್ಟಿಯನ್ನು ಸ್ಥಳೀಯ ಮಟ್ಟದಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ. ಇದರೊಂದಿಗೆ ಇನ್ನುಳಿದ ವಿಧಾನಸಭಾ ಸ್ಥಾನಗಳಲ್ಲೂ ಪಕ್ಷದ ನಿಷ್ಠೆ ಹಾಗೂ ಶ್ರಮವಹಿಸಿ ದುಡಿಯುವ ಬಹುತೇಕ ಕಾರ್ಯಕರ್ತರಿಗೆ ಪ್ರಚಾರ ನೀಡಿ ಚುನಾವಣಾ ಕಣಕ್ಕೆ ಇಳಿಸಬೇಕು ಎಂದು ರಾಜ್ಯ ಘಟಕಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.