ನಿನ್ನೆಯವರೆಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ಕೈಗೊಂಡಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ದಿಢೀರ್ ಆಗಿ ಚುನಾವಣಾ ರಾಜಕೀಯದಿಂದ ತಮ್ಮ ನಿವೃತ್ತಿ ಘೋಷಿಸಿದ್ದಾರೆ.
ಈ ಬಾರಿಯೂ ಈಶ್ವರಪ್ಪನವರೇ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದ ಅವರ ಅಭಿಮಾನಿಗಳಿಗೆ ಶಾಕ್ ಆಗಿದ್ದು, ಈಶ್ವರಪ್ಪನವರು ಈ ನಿರ್ಧಾರ ಕೈಗೊಂಡಿರುವುದರ ಹಿಂದೆ ಯಾವ ಕಾರಣವಿರಬಹುದು ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿವೆ.
ಮೂಲಗಳ ಪ್ರಕಾರ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ನವದೆಹಲಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕಳೆದ ರಾತ್ರಿ ಬೆಂಗಳೂರಿಗೆ ಮರಳಿದ್ದು, ಇವರೊಂದಿಗೆ ದೂರವಾಣಿ ಮೂಲಕ ಈಶ್ವರಪ್ಪನವರು ಮಾತುಕತೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ.
ಈ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ವಿದ್ಯಮಾನಗಳನ್ನು ಯಡಿಯೂರಪ್ಪನವರು ಈಶ್ವರಪ್ಪನವರಿಗೆ ತಿಳಿಸಿದ್ದು, ಈ ಬಾರಿ ಟಿಕೆಟ್ ನಿಮಗೆ ಸಿಗುವುದು ಕಷ್ಟ ಎಂದು ಹೇಳಿದ್ದರೆನ್ನಲಾಗಿದೆ. ಹೀಗಾಗಿ ಟಿಕೆಟ್ ಘೋಷಣೆಯಾದ ಬಳಿಕ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಲು ಈಶ್ವರಪ್ಪನವರು ಇಂದೇ ಚುನಾವಣಾ ರಾಜಕೀಯ ನಿವೃತ್ತಿ ನಿರ್ಧಾರ ಘೋಷಿಸಿರಬಹುದು ಎನ್ನಲಾಗುತ್ತಿದೆ.