ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ನಾಯತ್ವ ಬದಲಾವಣೆ ವದಂತಿಗಳಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆದಿದ್ದಾರೆ.
ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಮುಂದುವರೆಯಲಿದ್ದಾರೆ. ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಜೂನ್ 17 ಅಥವಾ 18 ರಿಂದ ಮೂರು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು, ಎಲ್ಲ ವಿಚಾರಗಳ ಬಗ್ಗೆ ಚರ್ಚೆ ನಡೆಸುವುದಾಗಿ ಅರುಣ್ ಸಿಂಗ್ ಗುರುವಾರ ದೆಹಲಿಯಲ್ಲಿ ಮಾಧ್ಯಮದವರಿಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಎಲ್ಲ ಗೊಂದಲಗಳಿಗೆ ತೆರೆ ಎಳೆದ ಅವರು, ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹೇಳಿಕೆ, ಸಹಿ ಸಂಗ್ರಹ, ಶಾಸಕರ ಬಹಿರಂಗ ಹೇಳಿಕೆ, ಆರೋಪ ಮೊದಲಾದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮಾಹಿತಿ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ ಶಾಸಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.