ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಒಂದು ಲಕ್ಷ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿ ಮಾಡುವುದಾಗಿ ಘೋಷಣೆ ಮಾಡಲಾಗಿದೆ.
ರಾಜ್ಯದ ಆಡಳಿತ ವ್ಯವಸ್ಥೆಯನ್ನು ಬಲಪಡಿಸಿ ನಾಗರೀಕರಿಗೆ ಉತ್ತಮ ಸೇವೆ ಒದಗಿಸಲು, ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಒಂದು ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮಹತ್ವದ ಘೋಷಣೆ ಮಾಡಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳನ್ನು ಕೂಡ ಭರ್ತಿ ಮಾಡಲಿದ್ದು, ಈ ಎಲ್ಲಾ ನೇಮಕಾತಿ ಪ್ರಕ್ರಿಯೆಯನ್ನು 2023 -24ನೇ ಸಾಲಿನಲ್ಲಿ ಪೂರ್ಣಗೊಳಿಸಿ ನೇಮಕಾತಿ ಆದೇಶ ನೀಡಲಾಗುತ್ತದೆ. ಆಡಳಿತದಲ್ಲಿ ದಕ್ಷತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಲಿದ್ದು, ಆಡಳಿತ ಸುಧಾರಣಾ ಆಯೋಗ ಸಲ್ಲಿಸಿದ 5 ವರದಿಗಳಲ್ಲಿ 3,630 ಇಲಾಖಾವಾರು ಶಿಫಾರಸುಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ವಹಿಸಲಾಗುವುದು. ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆ ಬಲಪಡಿಸಲು ಹೆಚ್ಚುವರಿ 2000 ಹುದ್ದೆ ಸೃಜಿಸಲಾಗುವುದು. ರಾಜ್ಯ ಕೈಗಾರಿಕಾ ಭದ್ರತಾ ಪಡೆ ಬಲಪಡಿಸಲು ಒಂದು ಸಾವಿರ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಲಾಗಿದೆ.