ಬೆಂಗಳೂರು: ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ ಸೇರಿದಂತೆ ನಾಲ್ಕು ನಿಗಮಗಳು ಬಸ್ ಟಿಕೆಟ್ ದರ ಏರಿಕೆಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲು ಮುಂದಾಗಿದ್ದು, ಈ ಬಗ್ಗೆ ಅಂಕಿ-ಅಂಶಗಳನ್ನು ಸಿದ್ಧಪಡಿಸಿವೆ.
ಬಿಎಂಟಿಸಿ ಬಸ್ ದರ ಏರಿಕೆ ಮಾಡಿ 10 ವರ್ಷಗಳಾಗಿವೆ. ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ದರ ಏರಿಸಿ ಐದು ವರ್ಷಗಳಾಗಿವೆ. ಸಾರಿಗೆ ನಿಗಮಗಳು ನಷ್ಟದಲ್ಲಿದ್ದು, ಈ ಹಿನ್ನೆಲೆಯಲ್ಲಿ ನಾಲ್ಕು ನಿಗಮಗಳ ಬಸ್ ಟಿಕೆಟ್ ದರ ಏರಿಸಲು ಸರ್ಕಾರಕ್ಕೆ ಮನವಿ ಮಾಡಲು ಮುಂದಾಗಿವೆ ಎಂದು ತಿಳಿದುಬಂದಿದೆ.
ಪೆಟ್ರೋಲ್, ಡೀಸೆಲ್ ದರ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಇಂಧನ ದರ ಏರಿಕೆಯಾಗುತ್ತಲೇ ಬಂದಿದೆ. ಅದಕ್ಕೆ ಅನುಗುಣವಾಗಿ ಟಿಕೆಟ್ ದರ ಏರಿಕೆಯಾಗಬೇಕು ಎಂಬುದು ನಾಲ್ಕು ನಿಗಮಗಳ ಒತ್ತಾಯ. ಟಿಕೆಟ್ ದರ ಶೇ.25ರಿಂದ ಶೇ.28ರಷ್ಟು ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಲು ಮುಂದಾಗಿವೆ. ಈ ನಿಟ್ಟಿನಲ್ಲಿ ಸಂಕ್ರಾಂತಿ ಸಭೆಯ ಬಳಿಕ ಬಸ್ ಟಿಕೆಟ್ ದರ ಏರಿಕೆ ಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.